ಬಿಜೆಪಿ ಜನಜಾಗೃತಿ ಸಮಾವೇಶಕ್ಕೆ ಸರಿ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನೀರೀಕ್ಷೆ ಇದ್ದು, ಗುಲ್ಬರ್ಗದಲ್ಲಿ ನಡೆಯಲಿರುವ ಕಾರ್ಯಕ್ರಮ ಇತಿಹಾಸ ಸೃಷ್ಟಿಸಲಿದೆ ಎಂದು ಸಹಕಾರ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಆ.5ರಂದು ನಡೆಯಲಿರುವ ಸಮಾವೇಶದ ಪೂರ್ವಭಾವಿ ಸಿದ್ಧತೆಯಲ್ಲಿ ತೊಡಗಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಬಿಜೆಪಿ ಸರಕಾರ ಅನೇಕ ಜನಪರ ಯೋಜನೆ ಜಾರಿಗೆ ತಂದಿದ್ದು, ನಾಡಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿಪಕ್ಷದ ಧೋರಣೆ-ಸರಕಾರದ ಸಾಧನೆ ಕುರಿತು ಜನರಿಗೆ ತಿಳಿಸುವುದು ಈ ಸಮಾವೇಶದ ಉದ್ದೇಶ ಎಂದರು.
5ರಂದು ಬೆಳಗ್ಗೆ 11ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರಾದ ರಾಜನಾಥ್ ಸಿಂಗ್, ಅನಂತ ಕುಮಾರ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಆಗಮಿಸಲಿದ್ದಾರೆ. ಮಂತ್ರಿಗಳು, ಸಂಸದರು, ಶಾಸಕರು, ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಸಮಾವೇಶದಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದ್ದು, 1 ಲಕ್ಷ ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಆಹಾರ, ಸಭಾಮಂಟಪ ನಿರ್ವಹಣೆ, ಸಾರಿಗೆ ಸೇರಿದಂತೆ ನಾನಾ ಹಂತದಲ್ಲಿ ಸಮಿತಿ ರಚಿಸಲಾಗಿದೆ. ಪಕ್ಷದ ಶಾಸಕರು, ಮುಖಂಡರಿಗೆ ಇದರ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.