ಸರಕಾರದ ಸಾಧನೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದ್ದು, ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗುಲ್ಬರ್ಗ ಮತ್ತು ದಾವಣಗೆರೆಯಲ್ಲಿ ನಡೆದ ಸಮಾವೇಶಗಳಿಗೆ ಜನತೆಯಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಮೈಸೂರಿನಲ್ಲಿ ಶನಿವಾರ ನಡೆಯಲಿರುವ ಸಮಾವೇಶದಲ್ಲೂ ಎರಡು ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಕಾಂಗ್ರೆಸ್‌ನವರು ಇನ್ನು ಐದು ವರ್ಷ ಕಾಲ ನಿರಂತರ ಪಾದಯಾತ್ರೆ, ಸಂಘರ್ಷ ಮಾಸ ನಡೆಸಲಿ. ಆ ಮೂಲಕ ಅವರ ಪಕ್ಷ ಬಲಿಷ್ಠವಾಗಲಿ ಎಂದು ಹಾರೈಸುವುದಾಗಿ ವ್ಯಂಗ್ಯವಾಡಿದ ಅವರು, ಪ್ರತಿಪಕ್ಷಗಳು ವಿನಾಕಾರಣ ವಿವಾದ ಸೃಷ್ಟಿಸುತ್ತಿವೆ. ಸಮಾವೇಶದ ಮೂಲಕ ಜನತೆಗೆ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿದರು.
ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ರಾಜ್ಯಪಾಲರ ಜತೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ. ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕಲು ಹೊಸ ನಿಯಮಾವಳಿ ರೂಪಿಸಲಾಗುವುದು. ಅಕ್ರಮ ತಡೆಯಲು ಎಲ್ಲ ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದರು.