ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಕಂಡು ಬಂದಲ್ಲಿ ಅರಣ್ಯ ಅಧಿಕಾರಿಗಳನ್ನೇ ಹೊಣೆ ಮಾಡುತ್ತೇನೆ. ಹುಷಾರಾಗಿ ಕರ್ತವ್ಯ ನಿರ್ವಹಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಅರಣ್ಯ ಮತ್ತು ಹಣಕಾಸು ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಭಾಗದಲ್ಲಿಯೂ ಅಕ್ರಮ ಗಣಿಗಾರಿಕೆ ನಡೆಯಬಾರದು. ಅದಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲಿಯಾದರೂ ಅಂತಹ ಪ್ರಕರಣ ಗಮನಕ್ಕೆ ಬಂದರೆ ನಿಮ್ಮ ತಲೆದಂಡ ಗ್ಯಾರಂಟಿ ಎಂದು ಎಚ್ಚರಿಸಿದ್ದಾರೆ.
ಅಕ್ರಮ ಗಣಿಗಾರಿಕೆ ತಡೆಗಟ್ಟಲು ಕೇಂದ್ರ ಸಚಿವ ಸಂಪುಟ ಉನ್ನತ ಸಮಿತಿ ನೇಮಕ ಮಾಡಿರುವುದನ್ನು ಸ್ವಾಗತಿಸಿದ ಅವರು, ಕೊನೆಗೂ ಕೇಂದ್ರ ಸರಕಾರಕ್ಕೆ ಜ್ಞಾನೋದಯವಾಯಿತಲ್ಲ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದರು.
15 ದಿನ ಕಾದು ನೋಡಿ!: ರಾಜ್ಯದ ಕೆಲವು ಭಾಗಗಳಲ್ಲಿ ಡೆಂಘೀ ಮತ್ತು ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿದ್ದು, ಅಂತಹ ಕಡೆ ಔಷಧ ಪೂರೈಕೆ ಮಾಡಲು ಮತ್ತು ವಿಶೇಷ ಗಮನ ಕೊಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.
ಆದರೆ ಆರೋಗ್ಯ ಸಚಿವ ಶ್ರೀರಾಮುಲು ಮಾಡಬೇಕಾದ ಕೆಲಸ ನೀವೇ ಮಾಡುತ್ತಿದ್ದೀರಲ್ಲ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ, 15 ದಿನಗಳ ಕಾಲ ಕಾದು ನೋಡಿ ಎಂದು ಮಾರ್ಮಿಕವಾಗಿ ಉತ್ತರಿಸಿದರು. ಅಂತೂ ಮುಂದಿನ ಎರಡು ವಾರಗಳಲ್ಲಿ ಸಚಿವ ಸಂಪುಟದಲ್ಲಿ ಭರ್ಜರಿ ಸರ್ಜರಿ ನಡೆಯಲಿದೆ ಎಂಬ ಬಗ್ಗೆ ಮುಖ್ಯಮಂತ್ರಿಗಳು ಪರೋಕ್ಷವಾಗಿ ಸೂಚನೆ ಕೊಟ್ಟಂತಾಗಿದೆ!