ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಜಾರಿ ಮಾಡಬಾರದು ಎಂದು ಕಾಂಗ್ರೆಸ್, ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಗೋ ಹತ್ಯೆ ನಿಷೇಧ ಕುರಿತ ವಿಧೇಯಕಕ್ಕೆ ಅಂಕಿತ ಹಾಕುವಂತೆ ರಾಷ್ಟ್ರಪತಿಗಳ ಮೇಲೆ ಒತ್ತಡ ಹೇರಲು ಬಿಜೆಪಿ ಸೆಪ್ಟೆಂಬರ್ 1ರಿಂದ 5ರವರೆಗೆ ರಾಜ್ಯಾದ್ಯಂತ ಧರಣಿ ನಡೆಸಲು ನಿರ್ಧರಿಸಿದೆ.
ಗೋ ಹತ್ಯೆ ನಿಷೇಧ ಮಸೂದೆಗೆ ಅಂಕಿತ ಹಾಕದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಈಗಾಗಲೇ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಆದರೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಜಾರಿಗೊಳಿಸುವ ಮಸೂದೆಗೆ ವಿಧಾನಮಂಡಲದ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಲಾಗಿದೆ. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಡ್ಡಗಾಲು ಹಾಕುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಆ ನಿಟ್ಟಿನಲ್ಲಿ ಸೆಪ್ಟೆಂಬರ್ 6ರಂದು ರಾಜ್ಯಮಟ್ಟದ ಧರಣಿ ಆಯೋಜಿಸಲಿದ್ದು, ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.
ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ಅಂಗೀಕಾರ ಹಾಕುವಂತೆ ರಾಷ್ಟ್ರಪತಿಗಳ ಮೇಲೆ ಒತ್ತಡ ಹೇರಲು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿರುವುದಾಗಿ ಹೇಳಿರುವ ಬಿಜೆಪಿ, ದೇಶದ 12 ರಾಜ್ಯಗಳಲ್ಲಿ ಈಗಾಗಲೇ ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕರಿಸಿ ಜಾರಿಗೊಳಿಸಲಾಗಿದೆ ಎಂದು ಹೇಳಿದೆ.