ಅಧಿಕಾರ ಇದ್ದಾಗ ಕಾಂಗ್ರೆಸ್ ಅಭಿವೃದ್ಧಿ ಮಾಡಿಲ್ಲ: ಯಡಿಯೂರಪ್ಪ
ಮಂಗಳೂರು, ಮಂಗಳವಾರ, 24 ಆಗಸ್ಟ್ 2010( 15:29 IST )
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಏನೂ ಮಾಡಲಿಲ್ಲ. ಈಗ ನಾವು ಅಭಿವೃದ್ಧಿ ಕೆಲಸ ಮಾಡುವಾಗ ನೋಡಲೂ ಸಿದ್ಧರಿಲ್ಲ, ಕೇಳಲೂ ಸಿದ್ಧರಿಲ್ಲ. ಮಾಡಲು ಏನೂ ಕೆಲಸ ಇಲ್ಲದೆ ಪರಿತಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟೀಕಿಸಿದ್ದಾರೆ.
ನಾನೇನೂ ಇಲ್ಲಿ ಸಮಾವೇಶ ಮಾಡಲು ಬಂದಿಲ್ಲ. ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯಬೇಕಾಗಿದೆ. ಅದರ ಶಿಲಾನ್ಯಾಸ, ಉದ್ಘಾಟನೆಗಾಗಿ ಬಂದಿದ್ದೇನೆ. ನಮ್ಮ ಅವಧಿಯಲ್ಲಿ ನಿಗದಿತ ಅಭಿವೃದ್ಧಿ ಕಡೆಗೆ ಮಾತ್ರ ಗಮನ ಕೊಡುತ್ತೇವೆ ಎಂದು ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರಿಗೆ ತಿಳಿಸಿದರು.
ಮುಂದಿನ ಮೂರು ವರ್ಷಗಳಲ್ಲಿ ಪ್ರತಿದಿನಕ್ಕೆ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿ ಮಾಡುತ್ತೇವೆ. ಇದರಿಂದ ಕೈಗಾರಿಕೋದ್ಯಮಿಗಳು, ರೈತರಿಗೆ, ನಾಗರಿಕರಿಗೆ ಪ್ರಯೋಜನವಾಗಲಿದೆ ಎಂದ ಅವರು, ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಸಿದ್ಧತೆ ಬಗ್ಗೆ ಮಾತ್ರ ಮಾತನಾಡಿದ್ದೇವೆ ಹೊರತು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿಲ್ಲ ಎಂದರು.
ನಾಗರಪಂಚಮಿ ದಿನ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ ದುರಸ್ತಿಗೆ ಒಂದು ಕೋಟಿ ರೂ. ನೀಡುವುದಾಗಿ ಘೋಷಿಸಿದ್ದೆ. ಆ ಬಗ್ಗೆ ಈಗಾಗಲೇ ಆದೇಶ ನೀಡಿದ್ದೇನೆ. ಜಿಲ್ಲಾಧಿಕಾರಿ ಹಣ ಬಿಡುಗಡೆ ಮಾಡಲಿದ್ದು, ವರ್ಷದೊಳಗೆ ದೇವಸ್ಥಾನದ ರೂಪ ಬದಲಾಗಬೇಕಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.