ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ವಿಚಾರದಲ್ಲಿ ರಾಜಕೀಯ ಮಾಡಲು ಹೊರಟವರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಎಂದು ಆರೋಪಿಸಿರುವ ಗೃಹ ಸಚಿವ ವಿ.ಎಸ್.ಆಚಾರ್ಯ, ಮಾಜಿ ಪ್ರಧಾನಿ ದೇವೇಗೌಡರು ಮೊದಲು ಸಂವಿಧಾನವನ್ನು ಅಧ್ಯಯನ ಮಾಡಲಿ ಎಂದು ಸಲಹೆ ನೀಡಿದ್ದಾರೆ.
ಜಿಲ್ಲೆಯ ಜಾವಗಲ್‌ನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಮಸೂದೆ ಅಂಗೀಕರಿಸುವ ವಿಚಾರದ ಬಗ್ಗೆ ಗೌಡರು ಸಂವಿಧಾನ ಅರಿತು ಮಾತನಾಡಬೇಕು. ಅಲ್ಪಸಂಖ್ಯಾತರ ಓಲೈಕೆಗಾಗಿ ಕಸರತ್ತು ನಡೆಸುತ್ತಿರುವ ಜೆಡಿಎಸ್ ಅನಾವಶ್ಯಕವಾಗಿ ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಗೀಕಾರ ಹಾಕಬಾರದು ಎಂದು ಒತ್ತಡ ಹೇರುತ್ತಿದೆ ಎಂದರು.
ಬಿಜೆಪಿ ಯಾವುದೇ ವೋಟ್ ಬ್ಯಾಂಕ್ ರಾಜಕಾರಣ ಮಾಡಲು ಈ ಕಾಯ್ದೆ ಜಾರಿಗೊಳಿಸಲು ಮುಂದಾಗಿಲ್ಲ, ರೈತರ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ನಿರ್ಧರಿಸಿರುವುದಾಗಿ ಸ್ಪಷ್ಟಪಡಿಸಿದರು.
ಅಲ್ಲದೇ ಗೋ ಹತ್ಯೆ ನಿಷೇಧಕ್ಕೆ ವಿರೋಧ ವ್ಯಕ್ತಪಡಿಸುವವರು ಅಜ್ಞಾನಿಗಳು ಎಂದು ಆಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.