ಕಡೂರು ಮತ್ತು ಗುಲ್ಬರ್ಗ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಭರ್ಜರಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಪಕ್ಷಕ್ಕೆ ಪಾದಯಾತ್ರೆಯೇ ಗತಿಯಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ರಾತ್ರಿ ಪಕ್ಷದ ಪ್ರಮುಖರ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಕ್ಕೆ ಅಡ್ಡಗಾಲು ಹಾಕುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಬೂಟಾಟಿಕೆಯನ್ನು ರಾಜ್ಯದ ಜನ ಗಮನಿಸುತ್ತಿರುವುದಾಗಿ ಹೇಳಿದರು.
ಉಪ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು, ಶಾಸಕರು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಸಭೆ ನಡೆಸಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ಆಡಳಿತಾರೂಢ ಬಿಜೆಪಿ ಪಕ್ಷ ರಾಜ್ಯದಲ್ಲಿ ಜನಪರ ಆಡಳಿತ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಆ ನಿಟ್ಟಿನಲ್ಲಿ ಕಡೂರು ಮತ್ತು ಗುಲ್ಬರ್ಗ ಕ್ಷೇತ್ರದ ಜನರು ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದರು.