ಹಾಸನ, ಮೈಸೂರು ವೈದ್ಯಕೀಯ ಕಾಲೇಜಿನ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ಅವ್ಯವಹಾರ ನಡೆಯಲು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡರೇ ನೇರ ಹೊಣೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಅವರು ಬುಧವಾರ ಬೆಂಗಳೂರಿನಿಂದ ಕಡೂರಿಗೆ ಚುನಾವಣಾ ಪ್ರಚಾರಕ್ಕಾಗಿ ಹೋಗುತ್ತಿದ್ದ ಸಂದರ್ಭದಲ್ಲಿ ಅರಸೀಕೆರೆ ಪಟ್ಟಣದಲ್ಲಿ ಕೆಲ ಸಮಯ ತಂಗಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.
ವೈದ್ಯಕೀಯ ಕಾಲೇಜು ಸಿಬ್ಬಂದಿ ನೇಮಕ ಮಾಡುವಾಗ ರೋಸ್ಟರ್ ಪದ್ಧತಿಯನ್ನು ಅನುಸರಿಸಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಟೀಕಿಸಿದರು.
ವೈದ್ಯಕೀಯ ಕಾಲೇಜಿನಲ್ಲಿ ಅವ್ಯವಹಾರ ದುರುಪಯೋಗವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇಮಕಾತಿ ಆದೇಶ ರದ್ದುಪಡಿಸಿರುವುದು ಸೂಕ್ತವಾಗಿದೆ ಎಂದು ಹೇಳಿದರು.
ಕಡೂರು ಹಾಗೂ ಗುಲ್ಬರ್ಗಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಖಚಿತ ಎಂದ ಸಿದ್ದರಾಮಯ್ಯ, ಬಿಜೆಪಿ ಸರಕಾರದ ಆಡಳಿತ ಜನರು ನೋಡಿ ನೋಡಿ ಸುಸ್ತಾಗಿದ್ದಾರೆ ಎಂದು ದೂರಿದರು. ಬಿಜೆಪಿ ಸರಕಾರದಲ್ಲಿರುವ ಮಂತ್ರಿಗಳು ಹಣ ಮಾಡುವುದರಲ್ಲೇ ನಿರತರಾಗಿದ್ದು, ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು.