ಕಾಂಗ್ರೆಸ್ ಪಕ್ಷ ಸೋಲಿನಿಂದ ಕಂಗೆಟ್ಟಿದೆ. ಹಾಗಾಗಿ ಆತಂಕದಲ್ಲಿರುವ ಕಾರ್ಯಕರ್ತರಿಗೆ ಸ್ಥೈರ್ಯ ನೀಡಿ ಪಕ್ಷವನ್ನು ಮತ್ತಷ್ಟು ಬಲಗೊಳಿಸಬೇಕಾಗಿದೆ. ಆ ಹಿನ್ನೆಲೆಯಲ್ಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕಿ ಮೋಟಮ್ಮ ತಿಳಿಸಿದ್ದಾರೆ.
ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತಿತ್ತು. ಕಡೂರು ಕ್ಷೇತ್ರದ ಉಸ್ತುವಾರಿ ಹೊತ್ತಿದ್ದ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಿದ್ದರಾಮಯ್ಯ ರಾಜೀನಾಮೆ ನಂತರ ನನ್ನ ರಾಜೀನಾಮೆ ಬಗ್ಗೆಯೂ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರೊಂದಿಗೆ ಚರ್ಚಸಿದ್ದೆ. ಆದರೆ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ. ಹೀಗಾಗಿ ರಾಜೀನಾಮೆ ನೀಡಲು ನಿರ್ಧರಿಸಿದೆ ಎಂದು ಮೋಟಮ್ಮ ಹೇಳಿದರು.
ಹಿರಿಯ ಮುಖಂಡರಾಗಿರುವ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸದಂತೆ ಹೈಕಮಾಂಡ್ ಮೇಲೆ ಒತ್ತಡ ಹೇರುವುದಾಗಿ ತಿಳಿಸಿದ ಅವರು, ಸತತ ಸೋಲಿನಿಂದ ಕಂಗೆಟ್ಟಿರುವ ಪಕ್ಷದ ಏಳಿಗೆಗೆ ಸಿದ್ದರಾಮಯ್ಯನವರ ನಾಯಕತ್ವ ಅಗತ್ಯ ಇದೆ ಎಂದರು.