ಬೆಂಗಳೂರು, ಭಾನುವಾರ, 19 ಸೆಪ್ಟೆಂಬರ್ 2010( 08:28 IST )
ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಮತದಾರರು ಸೋಲುಣಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ರಾಜ್ಯಸಭಾ ಸದಸ್ಯ ವೆಂಕಯ್ಯನಾಯ್ಡು ವ್ಯಂಗ್ಯವಾಡಿದ್ದಾರೆ.
ಕಡೂರು ಹಾಗೂ ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಜನರು ಮರೆಯುವ ಮೊದಲು ಎಚ್ಚೆತ್ತುಕೊಂಡು ರಚನಾತ್ಮಕ ಕೆಲಸದಲ್ಲಿ ಸರಕಾರದೊಂದಿಗೆ ಕೈಜೋಡಿಸಲಿ ಎಂದು ಸಲಹೆ ನೀಡಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಮತ್ತು ಗುಜರಾತ್‌ನಲ್ಲಿ ನಡೆದ ಉಪ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ಗಂಟೆ. ನಕರಾತ್ಮಕ ರಾಜಕೀಯ ನಿಲುವುಗಳಿಂದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸರಿಯಾಗಿ ಕಪಾಳಮೋಕ್ಷ ಮಾಡಿದ್ದಾರೆ ಎಂದರು.
ಸಿಬಿಐ ಹಾಗೂ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡರೆ ಏನಾಗುತ್ತದೆ ಎಂಬುದಕ್ಕೆ ಈ ಚುನಾವಣೆಗಳೇ ನಿದರ್ಶನವಾಗಿದೆ. ರಾಜ್ಯದಲ್ಲಿ ಗೆಲುವು ಸಾಧಿಸಲು ಸಂಪೂರ್ಣವಾಗಿ ವಿಫಲವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಸರಕಾರವನ್ನು ಟೀಕಿಸುವ ನೈತಿಕ ಹಕ್ಕನ್ನೇ ಕಳೆದುಕೊಂಡಿದೆ ಎಂದರು ಹೇಳಿದರು.
ಬಳ್ಳಾರಿ ಪಾದಯಾತ್ರೆ ನಡೆಸಿದ ಮೇಲೆ ಹುಮ್ಮಸ್ಸಿನಲ್ಲಿದ್ದ ಕಾಂಗ್ರೆಸ್ ಪಕ್ಷ ಉಪಚುನಾವಣೆ ಫಲಿತಾಂಶ ಹೊರಬಿದ್ದ ನಂತರ ನೀರಿನಿಂದ ಹೊರತೆಗೆದ ಮೀನಿನಂತೆ ಒದ್ದಾಡುತ್ತಿದ್ದಾರೆ ಎಂದು ಟೀಕಿಸಿದರು.