ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸೆ.30 ಅಯೋಧ್ಯೆ ತೀರ್ಪು: ರಾಜ್ಯದಲ್ಲಿ ಶಾಲಾ-ಕಾಲೇಜಿಗೆ ರಜೆ (Allahabad High Court | Ayodhya | BJP | Karnataka | Yeddyurappa)
Bookmark and Share Feedback Print
 
ಅಯೋಧ್ಯೆ ವಿವಾದ ಕುರಿತಂತೆ ಅಲಹಾಬಾದ್ ಹೈಕೋರ್ಟ್ ಗುರುವಾರ ತೀರ್ಪು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಕಾಲೇಜುಗಳಿಗೆ ಸೆಪ್ಟೆಂಬರ್ 30 ಹಾಗೂ ಅ.1ರಂದು ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಆದರೆ ಸರಕಾರಿ ಕಚೇರಿಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಯಲ್ಲಿರುವುದಾಗಿ ಗೃಹ ಸಚಿವ ಆರ್.ಅಶೋಕ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಸೆ.30ರ ಬೆಳಗ್ಗಿನಿಂದ ಅಕ್ಟೋಬರ್ 2ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಅಯೋಧ್ಯೆ ನಿವೇಶನದ ಒಡೆತನದ ಅಂತಿಮ ತೀರ್ಪು ಗುರುವಾರ ಮಧ್ಯಾಹ್ನ 3.30ಕ್ಕೆ ಹೊರಬೀಳಲಿದೆ. ಆ ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರು ವಿವರಿಸಿದ್ದಾರೆ.

ಅಷ್ಟೇ ಅಲ್ಲ ರಾಜ್ಯದ ಜನರು ಶಾಂತಿ-ಸುವ್ಯವಸ್ಥೆ ಕಾಪಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದ ಕೋಮು ಸೂಕ್ಷ್ಮ ಪ್ರದೇಶದ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳುವಂತೆ ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸೆಪ್ಟೆಂಬರ್ 24ರಂದು ಅಯೋಧ್ಯೆ ತೀರ್ಪು ಪ್ರಕಟಿಸುವುದಾಗಿ ಈ ಮೊದಲು ಅಲಹಾಬಾದ್‌ನ ಲಕ್ನೋ ಪೀಠ ತಿಳಿಸಿತ್ತು. ಆಗ ರಾಜ್ಯಾದ್ಯಂತ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿತ್ತು. ಆದರೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಪೀಠ, ತೀರ್ಪಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದರಿಂದ ರಜೆಯನ್ನು ರದ್ದುಗೊಳಿಸಲಾಗಿತ್ತು. ಇದೀಗ ಸುಪ್ರೀಂಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ, ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಬಹುದು ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಅಂಗವಾಗಿ ರಾಜ್ಯಾದ್ಯಂತ ಶಾಲಾ-ಕಾಲೇಜಿಗೆ ರಜೆ ಸಾರಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ