ಮತ್ತೊಂದು ಶಾಕ್; ಸ್ಪೀಕರ್ ಬೋಪಯ್ಯ ವಿರುದ್ಧ ಅವಿಶ್ವಾಸ ನಿರ್ಣಯ
ಬೆಂಗಳೂರು, ಬುಧವಾರ, 6 ಅಕ್ಟೋಬರ್ 2010( 16:26 IST )
ಆಡಳಿತಾರೂಢ ಬಿಜೆಪಿ ಸರಕಾರಕ್ಕೆ ಪ್ರತಿಪಕ್ಷಗಳು ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಇದೀಗ ವಿಧಾನಸಭಾ ಸ್ಪೀಕರ್ ಕೆ.ಜಿ.ಬೋಪಯ್ಯ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿಯ ಪತ್ರವನ್ನು ಬುಧವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯ ಕಾರ್ಯದರ್ಶಿ ಪಾಟೀಲ್ ಅವರಿಗೆ ಸಲ್ಲಿಸಿದ್ದಾರೆ.
ವಿಧಾನಸಭೆಯಲ್ಲಿ ಸ್ಪೀಕರ್ ಬೋಪಯ್ಯ ಅವರು ಪಕ್ಷಾತೀತವಾಗಿ ನಡೆದುಕೊಳ್ಳದೆ ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆಂಬ ಅಸಮಾಧಾನದ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರು ಇಂದು ಸ್ಪೀಕರ್ ವಿರುದ್ಧವೇ ಅವಿಶ್ವಾಸ ನಿರ್ಣಯ ಗೊತ್ತುವಳಿಯ ಪತ್ರವನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಅವರ ನೇತೃತ್ವದಲ್ಲಿ ಪಾಟೀಲ್ ಅವರಿಗೆ ನೀಡಲಾಯಿತು.
ಸ್ಪೀಕರ್ ಅವರ ವಿರುದ್ಧ ಯಾವ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ವಿಧಾನಸಭಾ ಕಾರ್ಯಾಲಯ ನಿರ್ಣಯ ಕೈಗೊಳ್ಳುತ್ತದೆ ಎಂದು ಮೂಲವೊಂದು ತಿಳಿಸಿದೆ.
ಅಕ್ಟೋಬರ್ 12ರ ಸಂಜೆ 5ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅ.12ರಂದು ನಡೆಯುವ ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಬೋಪಯ್ಯ ಅವರ ಸ್ಪೀಕರ್ ಸ್ಥಾನವನ್ನು ಕಿತ್ತುಕೊಳ್ಳುವ ತಂತ್ರ ಜೆಡಿಎಸ್ ಮತ್ತು ಕಾಂಗ್ರೆಸ್‌ನದ್ದಾಗಿದೆ.
ಒಟ್ಟಾರೆ ರಾಜ್ಯರಾಜಕಾರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ತ್ರಿಶಂಕು ಸ್ಥಿತಿ ಎದುರಾಗಿದ್ದು, ಮತ್ತೊಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ರಣತಂತ್ರ ರೂಪಿಸುತ್ತಿರುವುದು ಕೂಡ ಬಿಜೆಪಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ. ಆ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ.