ಡೋಲಾಯಮಾನ ಸ್ಥಿತಿಯಲ್ಲಿರುವ ಬಿಜೆಪಿ ಸರಕಾರ ತನ್ನ ಅಸ್ತಿತ್ವ ಕಾಪಾಡಿಕೊಳ್ಳಲು ಆಪರೇಷನ್ ಕಮಲ ನಡೆಸುವ ಸಾಧ್ಯತೆ ಇದ್ದು, ಇದರಿಂದ ಬಚಾವಾಗಲು ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್‌ನಲ್ಲಿ ಇರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಅವರು, ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಅ. 11ರಂದು ಮುಖ್ಯಮಂತ್ರಿ ಯಡಿಯೂರಪ್ಪನವರು ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾದರೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರದಂತೆ ಮುಂದುವರಿಯಲಾಗುವುದು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈಗಾಗಲೇ ಮಾತುಕತೆ ನಡೆಸಿದ್ದಾರೆ ಎಂಬುದು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು.
ಶಾಸಕರನ್ನು ಖರೀದಿಸುವ ಹಾಗೂ ಬಿಜೆಪಿಯಲ್ಲಿ ಒಡಕು ಮೂಡಿಸುವ ಯಾವುದೇ ಕೆಲಸವನ್ನು ಕಾಂಗ್ರೆಸ್ ಮಾಡಿಲ್ಲ. ಬಿಜೆಪಿ ಸರಕಾರ ತನ್ನ ಸ್ವಂತ ತಪ್ಪಿನಿಂದ ಅಭದ್ರ ಸ್ಥಿತಿ ತಲುಪಿದೆ ಎಂದರು.