ವಿಶ್ವಾಸಮತ ಯಾಚನೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಯಶಸ್ವಿ ಆಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಶಿವಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ರಾಜಕೀಯ ಬಿಕ್ಕಟ್ಟಿಗೆ ಬಂಡಾಯ ಶಾಸಕರು ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಕಾರಣ ಎಂದು ಆರೋಪಿಸಿದರು.
ಯಡಿಯೂರಪ್ಪ ಸಿಎಂ ಆದ ನಂತರ ಐದು ನಿಮಿಷ ನೆಮ್ಮದಿಯಾಗಿ ಇರಲು ಅವಕಾಶ ನೀಡಲಿಲ್ಲ. ಬಿಜೆಪಿ ಸರಕಾರವನ್ನು ಹೇಗಾದರೂ ಮಾಡಿ ಅಧಿಕಾರದಿಂದ ಕೆಳಗಿಳಿಸಬೇಕೆಂಬ ಒಂದಂಶದ ಕುತಂತ್ರ ರಾಜಕಾರಣವನ್ನು ಪ್ರತಿಪಕ್ಷದವರು ನಿರಂತರವಾಗಿ ಮಾಡಿಕೊಂಡು ಬಂದರು. ಈ ಎಲ್ಲ ಕಾರಣದಿಂದ ರಾಜ್ಯದ ರಾಜಕಾರಣವನ್ನು ಜನರು ಕೆಟ್ಟ ದೃಷ್ಟಿಯಿಂದ ನೋಡುವಂತಾಗಿದೆ ಎಂದರು.
ಒಂದೆಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿಯಿಂದ ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದಿಸಿದರು.