ಜಗಳೂರು ಶಾಸಕ ಎಸ್.ವಿ.ರಾಮಚಂದ್ರ ರಾಜೀನಾಮೆ ಸುದ್ದಿ ಸುಳ್ಳು ಎಂದು ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡಿದ ಬೆನ್ನಲ್ಲೇ, ರಾಮಚಂದ್ರ ಅವರ ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ಬುಧವಾರ ಸ್ಪೀಕರ್ ಕೆ.ಜಿ.ಬೋಪಯ್ಯ ಅಧಿಕೃತವಾಗಿ ಘೋಷಿಸುವ ಮೂಲಕ ಗಾಳಿಸುದ್ದಿಗೆ ತೆರೆಬಿದ್ದಿತ್ತು. ಏತನ್ಮಧ್ಯೆ ರಾಮಚಂದ್ರ ಅವರು ರಾಜೀನಾಮೆ ನೀಡಿರುವುದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಅವರ ಪ್ರತಿಕೃತಿಯ ಅಣಕು ಶವಯಾತ್ರೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.
ಜಗಳೂರಿನ ಪ್ರಮುಖ ರಸ್ತೆಗಳಲ್ಲಿ ಪ್ರತಿಕೃತಿಯ ಶವಯಾತ್ರೆ ನಡೆಸಿದ ಕಾರ್ಯಕರ್ತರು ನಂತರ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಶಾಸಕ ಸ್ಥಾನವನ್ನು ಹಣಕ್ಕೆ ಮಾರಿಕೊಂಡ ಎಸ್.ವಿ.ರಾಮಚಂದ್ರ ಅವರಿಗೆ ಧಿಕ್ಕಾರ ಎಂಬ ಘೋಷಣೆಯ ಬೃಹತ್ ಬ್ಯಾನರ್ ಪ್ರದರ್ಶಿಸಿ ಮೆರವಣಿಗೆ ನಡೆಸಿದರು.
ಇದಕ್ಕೂ ಮುನ್ನ ರಾಮಚಂದ್ರ ಅವರ ಇಲ್ಲಿನ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಶವದ ಪ್ರತಿಕೃತಿ ಇಟ್ಟು ಪ್ರತಿಭಟಿಸಿದ ನಂತರ ಪ್ರತಿಕೃತಿಯನ್ನು ಸುಟ್ಟುಹಾಕಿದರು.
ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಯಾದ ಶಾಸಕ ರಾಮಚಂದ್ರ ಅವರು ತಮ್ಮ ಶಾಸಕ ಸ್ಥಾನವನ್ನು ಬಿಜೆಪಿಗೆ ಮಾರಿಕೊಂಡಿದ್ದು, ಕ್ಷೇತ್ರದ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಲು ರಾಮಚಂದ್ರ ಮುಂದಾಗಿರುವುದನ್ನು ಖಂಡಿಸಿ ಅ.25ರಂದು ಜಗಳೂರು ಬಂದ್‌ಗೆ ಜಿಲ್ಲಾ ಕಾಂಗ್ರೆಸ್ ಕರೆ ನೀಡಿದೆ.