ನಿಗದಿತ ಅವಧಿಯಲ್ಲೇ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ನಗರದಲ್ಲಿ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಿಗದಿತ ಅವಧಿಗೆ ಚುನಾವಣೆ ನಡೆಸಲು ಸರಕಾರ ಸಿದ್ಧತೆ ಮಾಡಿಕೊಂಡಿದೆ. ಆದರೆ, ಚುನಾವಣೆ ಯಾವಾಗ ನಡೆಸಬೇಕೆನ್ನುವುದು ಚುನಾವಣೆ ಆಯೋಗಕ್ಕೆ ಬಿಟ್ಟ ವಿಚಾರ ಎಂದರು.
ಪ್ರಸ್ತುತ ರಾಜಕೀಯ ಬೆಳವಣಿಗೆಯಿಂದ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರದು. ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಲಿದೆ. ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಈ ಹಿಂದೆ ಇಂಥ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಆರೋಪಿಸಿದರು.
ಸದ್ಯದ ಸನ್ನಿವೇಶದಲ್ಲಿ ಒಂದೇ ಪಕ್ಷದ ಸರಕಾರ ಆಡಳಿತ ನಡೆಸುವುದು ಕಷ್ಟಕರವಾಗಿದೆ. ದೇಶ ಭಕ್ತಿ, ನಿಷ್ಠೆಗೆ ಹೆಸರಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳನ್ನು ಒಗ್ಗಟ್ಟಿನಿಂದ ತೆಗೆದುಕೊಂಡು ಹೋಗಲು ನಾಯಕತ್ವ ವಹಿಸಬೇಕಿದೆ ಎಂದರು.
ರೈತರ ಕಬ್ಬಿನ ಬೆಲೆ ನಿಗದಿ ಕುರಿತು ಕೇಳಲಾದ ಪ್ರಶ್ನೆಗೆ ಕಾರ್ಖಾನೆ ಹಾಗೂ ರೈತರಿಗೆ ತೊಂದರೆಯಾಗದಂತೆ ಚರ್ಚಿಸಿ ಸೌಹಾರ್ದ ರೀತಿಯಲ್ಲಿ ಕಬ್ಬಿನ ದರ ನಿಗದಿಗೆ ಸಭೆ ಕರೆಯುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸುವುದಾಗಿ ಹೇಳಿದರು.