ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 'ಕೈ' ಶಾಸಕರಿಗೆ ಶೋಭಾ ಗಾಳ; ದಾಖಲೆ ಇದೆ: ಸಿದ್ದರಾಮಯ್ಯ (BJP | Congress | Siddaramiah | Shobha karandlaje | Yeddyurappa)
Bookmark and Share Feedback Print
 
ಶಾಸಕರ ಖರೀದಿಯಲ್ಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರನ್ನು ಉಲ್ಲೇಖಿಸಿದ್ದಕ್ಕೆ ಸಿದ್ದರಾಮಯ್ಯನವರದ್ದು ಹಿಟ್ ಅಂಡ್ ರನ್ ಕೇಸ್ ಎಂದು ಪ್ರತಿಕ್ರಿಯೆ ನೀಡಿದ್ದರು. ಏತನ್ಮಧ್ಯೆ ಸಚಿವೆ ಶೋಭಾ ಅವರು ಕಾಂಗ್ರೆಸ್ ಶಾಸಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸೆಳೆಯಲು ಪ್ರಯತ್ನಿಸಿದ ದಾಖಲೆ ನಮ್ಮ ಬಳಿ ಇದೆ ಎಂದು ಹೇಳುವ ಮೂಲಕ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಮ್ಮ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಮಾಡಿದ ಪ್ರಯತ್ನ ಹಾಗೂ ಒಡ್ಡಿದ ಆಮಿಷಗಳ ಬಗ್ಗೆ ನಮ್ಮ ಬಳಿ ದಾಖಲೆ ಇದೆ. ಯಾರು, ಯಾರು ಯಾವ ರೀತಿ ಆಮಿಷ ಒಡ್ಡಿದ್ದಾರೆ, ಯಾವ ಪಾತ್ರ ನಿರ್ವಹಿಸಿದ್ದಾರೆ ಎಂಬುದನ್ನು ಶೀಘ್ರವೇ ಬಹಿರಂಗಪಡಿಸುತ್ತೇನೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರ ಪ್ರಜಾಪ್ರಭುತ್ವದ, ಸಂವಿಧಾನದ ಎಲ್ಲ ನೀತಿ-ನಿಯಮಗಳನ್ನು ಗಾಳಿಗೆ ತೂರಿ ಶಾಸಕರ ಖರೀದಿಯಲ್ಲಿ ನಿರತವಾಗಿದೆ. ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದರೆ 25, 30, 50 ಕೋಟಿ ರೂಪಾಯಿ ಹಣದ ಆಮಿಷವೊಡ್ಡಿದ್ದಾರೆ. ಅಲ್ಲದೆ, ಸಚಿವ ಸ್ಥಾನ, ನಿಗಮ ಮಂಡಳಿ ಅಧ್ಯಕ್ಷಗಿರಿ ಕೊಡಿಸುವುದಾಗಿ ಹೇಳಿದ್ದಾರೆ. ಆ ನಿಟ್ಟಿನಲ್ಲಿ ಶಾಸಕರನ್ನು ಸೆಳೆಯಲು ಯತ್ನಿಸಿ ಕುದುರೆ ವ್ಯಾಪಾರ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಉಂಟಾಗಿರುವ ಅರಾಜಕತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇರ ಹೊಣೆ. ಈ ಸರಕಾರದಿಂದ ಜನಹಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮಾಡಲಿಕ್ಕೆ ಸಾಧ್ಯವಿಲ್ಲ. ಆದ್ದರಿಂದ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ಇಲ್ಲದೆ ಹೋದಲ್ಲಿ ಸರಕಾರವನ್ನು ವಜಾಗೊಳಿಸಬೇಕು ಎಂದರು.
ಸಂಬಂಧಿತ ಮಾಹಿತಿ ಹುಡುಕಿ