'ಇತ್ತೀಚೆಗಿನ ರಾಜಕೀಯ ಬೆಳವಣಿಗೆ ಹೇಸಿಗೆ ಹುಟ್ಟಿಸಿದೆ, ಇದರಲ್ಲಿ ಆಡಳಿತಾರೂಢ ಬಿಜೆಪಿ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ಎಲ್ಲಾ ಬೇವರ್ಸಿ ಪಕ್ಷಗಳು' ಎಂದು ಎಂದಿನಂತೆ ವಾಗ್ದಾಳಿ ನಡೆಸಿದವರು ವಾಟಾಳ್ ನಾಗರಾಜ್.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸೇರಿದಂತೆ ವಿಪಕ್ಷಗಳು ಬೇವರ್ಸಿ ಪಕ್ಷಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಂಗಳವಾರ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನೇತೃತ್ವದಲ್ಲಿ ನಗರದ ಮೈಸೂರ್ ಬ್ಯಾಂಕ್ ವೃತ್ತದ ಬಳಿ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ರಾಜಕೀಯ ಪಕ್ಷಗಳ ವಿರುದ್ಧ ಈ ರೀತಿಯಾಗಿ ಪ್ರತಿಕ್ರಿಯಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಎಂಇಎಸ್ ನಿರ್ನಾಮವಾಗಿದ್ದು, ಅಸ್ತಿತ್ವಕ್ಕಾಗಿ ಪರದಾಡುತ್ತಿದೆ. ಈ ಸಂದರ್ಭದಲ್ಲಿ ಕಾಲು ಕೆರೆದು ಜಗಳ ತೆಗೆಯುವ ಪ್ರವೃತ್ತಿ ಮುಂದುವರಿಸಿದೆ ಎಂದು ಆರೋಪಿಸಿದರು.
ರಾಜಕೀಯ ಪಿತೂರಿ, ಅನಗತ್ಯ ಪ್ರಲೋಭನೆ ಮಾಡುವ ಮೂಲಕ ಕನ್ನಡಿಗರನ್ನು ಕೆರಳಿಸುತ್ತಿದೆ. ಹಾಗಾಗಿ ಈ ಸಂಘಟನೆಯನ್ನು ಕೂಡಲೇ ನಿಷೇಧಿಸಬೇಕೆಂದು ಒತ್ತಾಯಿಸಿದರು. ಗಡಿವಿವಾದ ಮುಗಿದ ಅಧ್ಯಾಯ. ಅದನ್ನು ಎಲ್ಲರೂ ಒಪ್ಪಿದ್ದಾರೆ. ಬೆಳಗಾವಿ ಜನರ ಶಾಂತಿ ಭಂಗ ಮಾಡಲು ಎಂಇಎಸ್ ಸಂಘಟನೆ ನಿರಂತರ ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.