ದೇಶದ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಹೇಳಿಕೆ ನೀಡುತ್ತಿರುವ ಹಾಗೂ ಶಾಂತಿ ಕದಡಲು ಪ್ರಯತ್ನಿಸುತ್ತಿರುವ ಲೇಖಕಿ ಆರುಂಧತಿ ರಾಯ್ ಹಾಗೂ ಕಾಶ್ಮೀರದ ಪ್ರತ್ಯೇಕತವಾದಿ ಮುಖಂಡ ಸಯ್ಯದ್ ಗಿಲಾನಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸದ ಅನಂತ್ ಕುಮಾರ್ ಒತ್ತಾಯಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟು ಜನರ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡುತ್ತಿರುವ ಇವರ ವಿರುದ್ಧ ಕೇಂದ್ರ ಸರಕಾರ ಕ್ರಮ ಜರುಗಿಸಲು ಇನ್ನೂ ಮೀನಾಮೇಷ ಎಣಿಸುತ್ತಿರುವುದು ಏಕೆ ಎಂದು ತರಾಟೆಗೆ ತೆಗೆದುಕೊಂಡರು.
ಈ ವಿಚಾರದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕೇಂದ್ರ ಗೃಹ ಸಚಿವ ಚಿದಂಬರಂ ಮೌನ ವಹಿಸುವುದು ಸರಿಯಲ್ಲ. ಕೇಂದ್ರದ ನಿರ್ಧಾರ ಏನು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದರು.
ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳಿಗೆ ಹೀನಾಯ ಸೋಲು ಉಂಟಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.