ನೆರೆ ಸಂತ್ರಸ್ತರಿಗೆ ಸ್ಪಂದಿಸದ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಲು ಕಾಲಹರಣ ಮಾಡುತ್ತಿದ್ದಾರೆಂದು ಹರಿಹಾಯ್ದಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರದ ಹಗರಣ, ಭ್ರಷ್ಟಾಚಾರ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಶೀಘ್ರವೇ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರು ಶೆಡ್‌ಗಳಲ್ಲೇ ವಾಸ ಮಾಡುತ್ತಿದ್ದಾರೆ. ಮುಂದಿನ ವರ್ಷದೊಳಗೆ ಎಲ್ಲರಿಗೂ ಸೂರು ಕಲ್ಪಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಮಾತು ತಪ್ಪಿದ್ದಾರೆ. ಇದೀಗ ಕೇವಲ ಸಚಿವ ಸಂಪುಟ ವಿಸ್ತರಣೆ ಕರಸತ್ತಿನಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆಂದು ದೂರಿದರು.
ಸಚಿವ ಸಂಪುಟ ವಿಸ್ತರಣೆಯಾದರೆ ಸರಕಾರ ಪತನವಾಗುವುದು ಖಚಿತ ಎಂದು ಭವಿಷ್ಯ ನುಡಿದ ಅವರು, ಇದಕ್ಕೆ ಹೆದರಿ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗಿದೆ ಎಂದು ಟೀಕಿಸಿದರು.
ನೆರೆ ಸಂತ್ರಸ್ತರಿಗೆ ಸ್ಪಂದಿಸದೆ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡದ ಯಡಿಯೂರಪ್ಪನವರು ಆ ಪ್ರದೇಶಗಳಿಗೆ ಭೇಟಿ ನೀಡದೆ ಸಚಿವ ಸಂಪುಟ ವಿಸ್ತರಣೆಗೆ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲು ನಾಗಪುರಕ್ಕೆ ಹೋಗಿರುವುದು ವಿಪರ್ಯಾಸ ಎಂದು ಸಿದ್ದು ವ್ಯಂಗ್ಯವಾಡಿದರು.