ಕಳೆದ ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಶಿವಮೊಗ್ಗ ಕ್ಷೇತ್ರದಲ್ಲಿ ಸೋಲಿಸಲು ಕೆ.ಎಸ್.ಈಶ್ವರಪ್ಪ ಸಂಚು ರೂಪಿಸಿದ್ದರು ಎಂದು ಅನರ್ಹ ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಘವೇಂದ್ರ ಪರ ಕೆಲಸ ಮಾಡಬೇಡ ಎಂದು ಈಶ್ವರಪ್ಪ ತನಗೆ ಗೌಪ್ಯವಾಗಿ ಹೇಳಿದ್ದರು ಎಂದು ಆರೋಪಿಸಿದ್ದಾರೆ. ಆದರೆ ತಾನು ಪಕ್ಷದ ಮೇಲಿನ ನಿಷ್ಠೆಯಿಂದಾಗಿ ರಾಘವೇಂದ್ರ ಪರ ಕೆಲಸ ಮಾಡಿರುವುದಾಗಿ ಹೇಳಿದರು.
ಆದರೆ ಈಶ್ವರಪ್ಪ ಅವರು ರಾಘವೇಂದ್ರ ಪರ ಕೆಲಸ ಮಾಡಿರುವುದಕ್ಕೆ ನನ್ನ ವಿರುದ್ಧ ಅಸಮಾಧಾನಗೊಂಡಿದ್ದರು. ಹಾಗಾಗಿ ಇದೀಗ ನನ್ನ ಸಚಿವ ಸ್ಥಾನವನ್ನು ತಪ್ಪಿಸುವ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.
ಮುಖ್ಯಮಂತ್ರಿ ಯಡಿಯೂರಪ್ಪನವರು ಸರ್ವಾಧಿಕಾರಿ ರೀತಿಯಲ್ಲಿ ವರ್ತಿಸುತ್ತಿದ್ದಾರೆಂದು ಕೂಡ ಈ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದರು. ಅನರ್ಹತೆ ಪ್ರಕರಣ ಕುರಿತಂತೆ ತಾವು ರಾಜ್ಯಪಾಲರ ಜೊತೆ ಚರ್ಚೆ ಮಾಡಿದ ನಂತರ ಅನರ್ಹ ಶಾಸಕರು ಬುಧವಾರ ದೆಹಲಿಗೆ ತೆರಳಿದ್ದು, ಗುರುವಾರ ಸುಪ್ರೀಂಕೋರ್ಟ್‌ನಲ್ಲಿ ಸ್ಪೀಕರ್ ಆದೇಶದ ವಿರುದ್ಧ ಅರ್ಜಿ ಸಲ್ಲಿಸುವುದಾಗಿ ಹೇಳಿದರು. ಸುಪ್ರೀಂಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇರುವುದಾಗಿ ತಿಳಿಸಿದರು.
ಅದೇ ರೀತಿ ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅನರ್ಹ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯವ್ಯಕ್ತಪಡಿಸಿದರು.