ಭೂಹಗರಣಗಳ ಸುಳಿಯಲ್ಲಿ ಸಿಲುಕಿ ಅತಂತ್ರ ಸ್ಥಿತಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಲೆದಂಡವಾದ್ರೆ ಅವರ ಉತ್ತರಾಧಿಕಾರಿ ಯಾರು? ಎಂಬ ಪ್ರಶ್ನೆಗೆ ಕಂದಾಯ ಸಚಿವ ಕರುಣಾಕರ ರೆಡ್ಡಿ, ದೇವರು ತೀರ್ಮಾನಿಸುತ್ತಾನೆ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ವಿತರಣೆ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.
ಬಳ್ಳಾರಿಯ ರೆಡ್ಡಿ ಸಹೋದರರನ್ನು ಸಂಪುಟದಿಂದ ಕೈಬಿಡಬೇಕು ಎಂದು ಯಡಿಯೂರಪ್ಪ ಪದತ್ಯಾಗಕ್ಕೆ ಸಂಬಂಧಿಸಿದಂತೆ ವಿಧಿಸಿದ್ದಾರೆ ಎನ್ನಲಾದ ಷರತ್ತುಗಳ ನಿಲುವಿಗೆ ಪ್ರತಿಕ್ರಿಯಿಸಿದ ರೆಡ್ಡಿ, ಪಕ್ಷದ ವರಿಷ್ಠರು ಹಾಗೂ ಯಡಿಯೂರಪ್ಪ ಅವರಿಂದ ಇದುವರೆಗೂ ನಮಗೆ ಆ ರೀತಿಯ ಸಂದೇಶ ಬಂದಿಲ್ಲ. ಹಾಗೇನಾದರೂ ಸೂಚಿಸಿದಲ್ಲಿ ಮುಂದೆ ಯೋಚಿಸುತ್ತೇವೆ ಎಂದರು.
ನಾಯಕತ್ವ ಬದಲಾವಣೆಯ ವಿಷಯದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಿರುವುದಾಗಿ ತಿಳಿಸಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷ, ನಾಯಕತ್ವ ಬದಲಾವಣೆಗೆ ಕೈಹಾಕುವ ಮುನ್ನ ವರಿಷ್ಠರು ಮುಂಬರುವ ಜಿ.ಪಂ, ತಾ.ಪಂ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.