ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ಪಕ್ಷಕ್ಕೆ ಉತ್ತಮ ಫಲಿತಾಂಶ ಬಾರದಿದ್ದರೆ ತಲೆ ದಂಡಕ್ಕೆ ಸಿದ್ದರಾಗಿ ಎಂಬ ಸಂದೇಶವನ್ನು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಿದೆ ಎಂದು ಮೂಲವೊಂದು ತಿಳಿಸಿದೆ.
ಒಟ್ಟು ಫಲಿತಾಂಶದಲ್ಲಿ ಶೇ.50ಕ್ಕಿಂತಲೂ ಹೆಚ್ಚಿನ ಫಲಿತಾಂಶ ಬರಬೇಕು. ಒಂದು ವೇಳೆ ಫಲಿತಾಂಶದಲ್ಲಿ ಪಕ್ಷಕ್ಕೆ ಹಿನ್ನಡೆಯಾದರೆ ಕುರ್ಚಿಯಿಂದ ಕೆಳಗಿಳಿಯಲು ಸಿದ್ದರಾಗಬೇಕೆಂದು ವರಿಷ್ಠರು ಸೂಚಿಸಿದ್ದಾರೆನ್ನಲಾಗಿದೆ.
ಬುಧವಾರ ನವದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಲೋಕಸಭೆಯ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹಾಗೂ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಸಂದೇಶ ನೀಡಿದ್ದಾರೆಂದು ಮೂಲ ಹೇಳಿದೆ.
ರಾಜ್ಯದಲ್ಲಿ ಶೀಘ್ರದಲ್ಲೇ ಪಂಚಾಯತ್ ಚುನಾವಣೆ ನಡೆಯಲಿದ್ದು, ಸರಕಾರಕ್ಕೆ ಇದು ಅಗ್ನಿಪರೀಕ್ಷೆಯಾಗಲಿದ್ದು, ಎರಡೂವರೆ ವರ್ಷಗಳ ಅವಧಿಯಲ್ಲಿ ನಿಮ್ಮ ಸಾಧನೆಗಳೇನು ಎಂಬುದನ್ನು ಚುನಾವಣೆಯಲ್ಲಿ ಸಾಬೀತುಪಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಪಕ್ಷಕ್ಕೆ ಮುಜುಗರ ತರುವಂತಹ ಪರಿಸ್ಥಿತಿ ನಿರ್ಮಾಣ ಮಾಡಿದರೂ,ನಿಮ್ಮನ್ನೇ ಅಧಿಕಾರದಲ್ಲಿ ಮುಂದುವರಿಯುವಂತೆ ಮಾಡಿದ್ದೇವೆ. ಈ ಬಾರಿ ಪಕ್ಷಕ್ಕೆ ಹಿನ್ನಡೆಯಾದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಸೂಚನೆ ನೀಡಿದ್ದಾರೆನ್ನಲಾಗಿದೆ.
ಅಷ್ಟೇ ಅಲ್ಲ, ಸುಷ್ಮಾ ಸ್ವರಾಜ್ ಅವರು ಯಡಿಯೂರಪ್ಪ ಅವರ ವರ್ತನೆ ಬಗ್ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಸರ್ವಾಧಿಕಾರಿ ಧೋರಣೆ ಬಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯುವಂತೆ ತಿಳಿಸಿದ್ದಾರೆ.