ಭೂ ಹಗರಣ, ನಾಯಕತ್ವ ಸೇರಿದಂತೆ ಎಲ್ಲ ವಿಚಾರಗಳಿಗೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣಾ ಫಲಿತಾಂಶವೇ ಉತ್ತರ ನೀಡಲಿದೆ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.
ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ದವಾಗಿರುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತ ವಿವರಿಸಿದ್ದಾರೆ.
ರಾಜ್ಯ ನಾಯಕತ್ವದ ಬಗ್ಗೆ ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ಸಂಪೂರ್ಣ ತೃಪ್ತಿ ಇದೆ. ಜನಾರ್ದನ ರೆಡ್ಡಿಯಾಗಿಯೂ ತೃಪ್ತಿ ತಂದಿದೆ ಎಂದು ಹೇಳಬಯಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಬಹುತೇಕ ಜನರಿಗೆ ಯೋಜನೆಗಳ ಲಾಭ ಆಗುತ್ತಿದೆ. ಆದರೆ ಅದೃಷ್ಟವೋ, ದುರಾದೃಷ್ಟವೋ ನಾವು ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ಪ್ರಚಾರ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.