ಸಿದ್ದರಾಮಯ್ಯ 'ಕೈ' ಬಿಡಲ್ಲ-ಜೆಡಿಎಸ್ ರಾಷ್ಟ್ರೀಯ ಪಕ್ಷವೇ?: ಖರ್ಗೆ
ಗುಲ್ಬರ್ಗ, ಮಂಗಳವಾರ, 14 ಡಿಸೆಂಬರ್ 2010( 13:28 IST )
ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷ ಬಿಟ್ಟು ಜೆಡಿಎಸ್ ಸೇರಲಿದ್ದಾರೆಂಬ ಎಚ್.ಡಿ.ರೇವಣ್ಣ ಅವರ ಹೇಳಿಕೆಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ಅದೇನು ರಾಷ್ಟ್ರೀಯ ಪಕ್ಷವೇ ಎಂದು ಖರ್ಗೆ ಖಾರವಾಗಿ ಪ್ರಶ್ನಿಸಿದರು. ಜೆಡಿಎಸ್ ಮುಖಂಡರು ಇಂತಹ ಕೀಳುಮಟ್ಟದ ಹೇಳಿಕೆ ನೀಡುವುದನ್ನು ಮೊದಲು ನಿಲ್ಲಿಸಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಯ ಲಾಭ ಪಡೆಯಬೇಕೆಂಬ ದುರುದ್ದೇಶದಿಂದ ರೇವಣ್ಣ ಈ ರೀತಿಯ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಆದರೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಸೇರಲು ನಿರ್ಧರಿಸಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಲು ಖರ್ಗೆ ನಿರಾಕರಿಸಿದರು.