ಆಡಳಿತಾರೂಢ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ ಆರೋಪಿಸಿರುವುದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾಕ್ಷ್ಯಾಧಾರ ಒದಗಿಸುವಂತೆ ಒತ್ತಾಯಿಸಿ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಸೋನಿಯಾಗಾಂಧಿ, ಕರ್ನಾಟಕದ ಬಿಜೆಪಿ ಅತ್ಯಂತ ಭ್ರಷ್ಟ ಸರಕಾರವಾಗಿದ್ದು, ಆ ನಿಟ್ಟಿನಲ್ಲಿ ಬಿಜೆಪಿ ಮುಖಂಡರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದರು.
ಉನ್ನತ ಹುದ್ದೆಯಲ್ಲಿರುವ ತಾವು ಆಧಾರರಹಿತ ಆರೋಪ ಮಾಡುವುದು ತಮ್ಮ ಘನತೆಗೆ ಶೋಭೆ ತರುವುದಿಲ್ಲ. ನನ್ನ ಹಾಗೂ ಸರಕಾರದ ತೇಜೋವಧೆ ಮಾಡಲು ರೂಪಿಸಿದ ವ್ಯವಸ್ಥಿತ ಸಂಚು ಇದಾಗಿದೆ. ನನ್ನ ವಿರುದ್ಧ ಮಾಡಿರುವ ಆರೋಪಕ್ಕೆ ಯಾವುದೇ ದಾಖಲೆ ಇಲ್ಲ. ಒಂದು ವೇಳೆ ತಮ್ಮ ಬಳಿ ಇದ್ದರೆ ದಯಮಾಡಿ ಕಳುಹಿಸಿಕೊಡಿ ಎಂದು ಯಡಿಯೂರಪ್ಪ ಪತ್ರದಲ್ಲಿ ವಿವರಿಸಿದ್ದಾರೆ.
ಅಷ್ಟೇ ಅಲ್ಲ ಮಾಜಿ ಮುಖ್ಯಮಂತ್ರಿ, ಹಾಲಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಆಡಳಿತ ಅವಧಿಯಲ್ಲಿ 4,466.34 ಎಕರೆ ಭೂಮಿ ಡಿನೋಟಿಫೈ ಮಾಡಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಕಿರು ಪುಸ್ತಕ ಹೊರತಂದಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಈ ಪುಸ್ತಕ ಬಿಡುಗಡೆ ಮಾಡಿದ್ದರು. ಇಂತಹ ಗಂಭೀರ ಆರೋಪ ಕೇಳಿಬಂದಿದ್ದರೂ ಕೃಷ್ಣ ಅವರ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ? ಅದೇ ರೀತಿ ಧರಂಸಿಂಗ್ ಅವರು ಗಣಿಗಾರಿಕೆಗೆ ಅನುಮತಿ ನೀಡಿ 23 ಕೋಟಿ ರೂ.ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ. ಆ ಹಣವನ್ನು ವಸೂಲಿ ಮಾಡುವಂತೆ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಲೋಕಾಯುಕ್ತರು ಶಿಫಾರಸು ಮಾಡಿದ್ದಾರೆ. ಆದರೆ ಆಗಿರುವ ನಷ್ಟದ ಹಣ ಮರು ಪಾವತಿಗೇಕೆ ಕಾಂಗ್ರೆಸ್ ಮುಂದಾಗಿಲ್ಲ ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾರೆ.
ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯ ಸಹಿಸಲಾಗದೆ ಕಾಂಗ್ರೆಸ್, ಜೆಡಿಎಸ್ ಮುಖಂಡರು ಸುಳ್ಳು ಆರೋಪ ಮಾಡಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರತಿಪಕ್ಷಗಳು ಸಹಕಾರ ನೀಡುತ್ತಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.