ದಿನನಿತ್ಯದ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರವೇ ಕಾರಣ: ಯಡಿಯೂರಪ್ಪ
ಬೆಂಗಳೂರು, ಮಂಗಳವಾರ, 21 ಡಿಸೆಂಬರ್ 2010( 20:06 IST )
ಈರುಳ್ಳಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಸರಕಾರವೇ ನೇರ ಹೊಣೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ರೇಸ್‌ಕೋರ್ಸ್ ರಸ್ತೆಯಲ್ಲಿನ ತಮ್ಮ ನಿವಾದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರ ಸರಕಾರದ ಆಮದು ಮತ್ತು ರಫ್ತು ನೀತಿಯಲ್ಲಿ ಕೆಲ ತಪ್ಪು ನಿಯಮಗಳು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣ ಎಂದು ಹೇಳಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಕುರಿತು ಬುಧವಾರ ಅಥವಾ ಗುರುವಾರ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಈ ಬೆಲೆ ಏರಿಕೆಯನ್ನು ನಿಯಂತ್ರಿಸಲು ರಾಜ್ಯ ಸರಕಾರ ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎನ್ನುವ ಬಗ್ಗೆ ಈ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಅಲ್ಲದೇ ರಾಜ್ಯದಲ್ಲಿನ ಭೂ ಹಗರಣ ಮತ್ತು ಅಕ್ರಮ ಗಣಿಗಾರಿಕೆ ಕುರಿತು ಬರೆದಿರುವ ಪತ್ರ ತೃಪ್ತಿ ತಂದಿಲ್ಲ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಅವರು, ರಾಜ್ಯಪಾಲರ ಬಗ್ಗೆ ಏನೂ ಪ್ರತಿಕ್ರಿಯೆ ನೀಡಲಾರೆ ಎಂದರು.