ಬಿಜೆಪಿಗೆ ತಕ್ಕ ಪಾಠ ಕಲಿಸಲು ಜನ ಸಿದ್ಧರಾಗಿದ್ದಾರೆ: ಖರ್ಗೆ
ಯಾದಗಿರಿ, ಬುಧವಾರ, 22 ಡಿಸೆಂಬರ್ 2010( 16:11 IST )
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ತಪ್ಪಿಗಾಗಿ ಪಶ್ಚಾತಾಪ ಪಡುತ್ತಿರುವ ಜನತೆ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲು ಸಿದ್ಧರಾಗಿದ್ದಾರೆ ಎಂದು ಕೇಂದ್ರ ಉದ್ಯೋಗ ಮತ್ತು ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ನಾಯ್ಕಲ್, ದೋರನಳ್ಳಿ ಮತ್ತಿತರ ಕಡೆ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಸಚಿವರು ಒಂದೊಂದು ಹಗರಣದಲ್ಲಿ ಸಿಲುಕಿ ಇಡೀ ವ್ಯವಸ್ಥೆಯನ್ನೇ ಭ್ರಷ್ಟಗೊಳಿಸಿದ್ದಾರೆಂದು ಟೀಕಿಸಿದರು.
ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದರಿಂದ ಗ್ರಾಮಗಳ ಅಭಿವೃದ್ಧಿ ಕುಂಠಿತವಾಗಿದೆ ಎಂದು ಅವರು ಆರೋಪಿಸಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕಾರಣರಾಗಬೇಕೆಂದು ಅವರು ಮತದಾರರಲ್ಲಿ ಮನವಿ ಮಾಡಿದರು.
ಶ್ರೀಮತಿ ಇಂದಿರಾಗಾಂಧಿಯವರ ಕಾಲದಿಂದಲೂ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸುತ್ತಿರುವ ಹಿಂದುಳಿದ ವರ್ಗಗಳು, ಅಲ್ಪ-ಸಂಖ್ಯಾತರು, ಪರಿಶಿಷ್ಟ ಜಾತಿ, ವರ್ಗದ ಜನ ಈ ಸಲವೂ ಪಕ್ಷವನ್ನು ಕೈ ಬಿಡುವುದಿಲ್ಲವೆಂದರು.