ರಾಜ್ಯದ ಅಭಿವೃದ್ಧಿ ಹಾಗೂ ಕೃಷ್ಣಾ ಜಲ ನ್ಯಾಯಾಧೀಕರಣ ಎರಡನೇ ತೀರ್ಪು ವಿಚಾರವಾಗಿ ರಾಜ್ಯಪಾಲರ ಜತೆ ಮಾತುಕತೆ ನಡೆಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಆಡಳಿತಾರೂಢ ಬಿಜೆಪಿ ಸರಕಾರ ಮತ್ತು ರಾಜ್ಯಪಾಲರ ನಡುವೆ ಜಂಗೀಕುಸ್ತಿ ನಡೆಯುತ್ತಿದ್ದ ನಡುವೆಯೇ ಸಂಘರ್ಷ ಶಮನಕ್ಕೆ ಮುಂದಾಗಿರುವ ಮುಖ್ಯಮಂತ್ರಿಗಳು ಶುಕ್ರವಾರ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇನ್ನು ಮುಂದೆ 15 ದಿನಗಳಿಗೊಮ್ಮೆ ರಾಜ್ಯಪಾಲರನ್ನು ಭೇಟಿಯಾಗುತ್ತೇನೆ ಎಂದರು.
ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವಂತೆ ಆಹ್ವಾನ ನೀಡಿದ್ದು, ರಾಜ್ಯಪಾಲರು ಈ ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ. ಮಾತುಕತೆ ಅತ್ಯಂತ ಸೌಹಾರ್ದಯುತವಾಗಿತ್ತು. ಇದೊಂದು ಸೌಜನ್ಯದ ಭೇಟಿ. ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರ ಜತೆ ಚರ್ಚೆ ಮಾಡಿ ಸಲಹೆ, ಅಭಿಪ್ರಾಯಗಳನ್ನು ಪಡೆದಿದ್ದೇನೆ ಎಂದು ತಿಳಿಸಿದರು.
ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ನಡುವೆ ಪತ್ರ ಸಮರ ನಡೆದಿತ್ತು. ಗುರುವಾರ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಉಸ್ತುವರಿ ವಹಿಸಿಕೊಂಡಿರುವ ಅರುಣ್ ಜೇಟ್ಲಿ ಬೆಂಗಳೂರಿಗೆ ಬಂದು ರಾಜ್ಯಪಾಲರೊಂದಿಗೆ ಸಂಘರ್ಷ ಬೇಡ ಎಂದು ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದರು. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯಪಾಲ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.