ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ವಹಿಸಿಕೊಂಡಿರುವ ಧರ್ಮೆಂದ್ರ ಪ್ರಧಾನ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಚುನಾವಣೆ ಫಲಿತಾಂಶ ಮತ್ತು ಸಾಧನೆ ನಮಗೆ ತೃಪ್ತಿ ತಂದಿದೆ. ಸರಕಾರದ ವಿರುದ್ಧ ವಿರೋಧ ಪಕ್ಷಗಳು ಮಾಡಿದ ಆರೋಪಗಳಲ್ಲಿ ಸತ್ಯಾಂಶ ಇಲ್ಲ. ಜನರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಈ ಫಲಿತಾಂಶದಿಂದ ಸಾಬೀತಾಗಿದೆ ಎಂದರು.
ರಾಜ್ಯದ ಜಿ.ಪಂ.ಮತ್ತು ತಾ.ಪಂ.ಚುನಾವಣಾ ಫಲಿತಾಂಶದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷಗಳು ಮಾಡಿದ ಆರೋಪ ಮತ್ತು ಅಪಪ್ರಚಾರ ಸುಳ್ಳು. ಜನತಾ ನ್ಯಾಯಾಲಯದಲ್ಲಿ ಯಡಿಯೂರಪ್ಪ ಅವರು ಗೆದ್ದಿದ್ದಾರೆ. ಅವರ ನಾಯಕತ್ವಕ್ಕೆ ಯಾವುದೇ ಸಮಸ್ಯೆ ಇಲ್ಲ. ಮುಂದಿನ ಎರಡೂ ಕಾಲು ವರ್ಷಗಳ ಕಾಲ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.