ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಶಿಕ್ಷಕರ ನಿವೃತ್ತಿ ವಯಸ್ಸು ಹೆಚ್ಚಿಸಿದ ಹಿನ್ನೆಲೆಯಲ್ಲಿ ಹೊಸ ನೇಮಕಾತಿ ನಡೆದಿಲ್ಲ. ಜತೆಗೆ ಯಾವ ಜಿಲ್ಲೆಗಳಲ್ಲೂ ಶಿಕ್ಷಕರ ಕೊರತೆ ಕಾಣಿಸುತ್ತಿಲ್ಲ. ಹುದ್ದೆಗಳು ಖಾಲಿಯಾದ ನಂತರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಮಕ್ಕಳ ಅನುಪಾತಕ್ಕೆ ತಕ್ಕಂತೆ ಶಿಕ್ಷಕರು ಇದ್ದಾರೆ. ಹಾಗಾಗಿ ಶಿಕ್ಷಕರ ನೇಮಕ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸೈಕಲ್ ನೀಡುವುದೇ ಸೂಕ್ತ ಎನ್ನುವ ಅಭಿಪ್ರಾಯವನ್ನು ಎಲ್ಲರೂ ವ್ಯಕ್ತಪಡಿಸುತ್ತಿದ್ದು, ಸರಕಾರ ಇದನ್ನೇ ಮುಂದುವರಿಸಿಕೊಂಡು ಹೋಗಬೇಕು ಎನ್ನುವ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಅವರು ಹೇಳಿದರು.