ಆಡಳಿತಾರೂಢ ಬಿಜೆಪಿ ಸರಕಾರ ಮತ್ತು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ನಡುವಿನ ಸಂಘರ್ಷ ತಾರಕ್ಕೇರಿರುವ ಸಂದರ್ಭದಲ್ಲಿಯೇ, ರಾಜ್ಯಪಾಲರನ್ನು ಯಾವುದೇ ಕಾರಣಕ್ಕೂ ವಾಪಸ್ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆಗಿರುವ ಗುಲಾಂ ನಬಿ ಆಜಾದ್ ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವ ಪ್ರಸ್ತಾಪವಿಲ್ಲ. ಅಂತಹ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ ರಾಜ್ಯದ ಜನರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರದ ಗದ್ದುಗೆಯಿಂದ ಕೆಳಗಿಳಿಯಬೇಕು ಎಂದು ಅಪೇಕ್ಷಿಸುತ್ತಿದ್ದಾರೆ. ಹಾಗಾಗಿ ಇಂತಹ ಸಂದರ್ಭದಲ್ಲಿ ಅವರನ್ನು ವಾಪಸ್ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಬಿಜೆಪಿ ಸರಕಾರದಲ್ಲಿರುವ ಹಲವಾರು ಸಚಿವರು ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ. ಜತೆಗೆ ಮುಖ್ಯಮಂತ್ರಿಗಳ ವಿರುದ್ಧವೂ ಆರೋಪ ಇದೆ. ಆದರೆ ಬಿಜೆಪಿ ಹೈಕಮಾಂಡ್ ಅವರನ್ನು ರಕ್ಷಿಸುತ್ತಿದೆ. ಆ ನಿಟ್ಟಿನಲ್ಲಿ ಅವರು ನೈತಿಕತೆಯಿಂದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.
ಆದರ್ಶ ಸೊಸೈಟಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಬಂದ ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅದರಂತೆಯೇ ಯಡಿಯೂರಪ್ಪ ಕೂಡ ನಡೆದುಕೊಳ್ಳಬೇಕು ಎಂದು ತಿಳಿಸಿದರು.
ವಿಧಾನಸಭಾಧ್ಯಕ್ಷರನ್ನು ಬಳಸಿಕೊಂಡು ಮುಖ್ಯಮಂತ್ರಿ ಗದ್ದುಗೆ ಉಳಿಸಿಕೊಳ್ಳುವ ಕೆಲವನ್ನು ಯಡಿಯೂರಪ್ಪ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ದೊಡ್ಡ ದುರಂತ ಎಂದು ಟೀಕಿಸಿದರು.