ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗವರ್ನರ್ ವಿರುದ್ಧ ವಾರ್; ರಾಜ್ಯ ಬಂದ್, ಬಸ್‌ಗೆ ಬೆಂಕಿ (BJP | Yeddyurappa | Bharadwaj | Police | Congress)
Bookmark and Share Feedback Print
 
ಭ್ರಷ್ಟಾಚಾರದ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಶುಕ್ರವಾರ ರಾತ್ರಿ ಗ್ರೀನ್ ಸಿಗ್ನಲ್ ನೀಡಿರುವುದನ್ನು ತೀವ್ರವಾಗಿ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಬಸ್, ಆಟೋ ರಿಕ್ಷಾಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ರಾಜ್ಯಾದ್ಯಂತ ಬಂದ್‌ನಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಭೂಹಗರಣ ಮತ್ತು ಭ್ರಷ್ಟಾಚಾರ ಆರೋದಡಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ರಾಜ್ಯಪಾಲರು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅನುಮತಿ ನೀಡಿರುವುದು ಇದು ಮೊದಲ ಪ್ರಕರಣವಾಗಿದೆ. ಇದರಿಂದಾಗಿ ಆಡಳಿತಾರೂಢ ಬಿಜೆಪಿ ಸರಕಾರ ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ-ಕೆಎಸ್‌ಆರ್‌ಟಿಸಿ, ಬಿಎಂಟಿಸಿ
ಪ್ರತಿಭಟನಾಕಾರರು ಬಸ್‌ಗಳ ಮೇಲೆ ಕಲ್ಲೂ ತೂರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆಗಳಲ್ಲಿನ ಬಸ್ ಸಂಚಾರವನ್ನು ರದ್ದುಗೊಳಿಸಿರುವುದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್‌ಟಿಸಿ) ವಕ್ತಾರರು ತಿಳಿಸಿದ್ದಾರೆ. ಏತನ್ಮಧ್ಯೆ ಶುಕ್ರವಾರ ರಾತ್ರಿಯೇ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ನಗರದಲ್ಲಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಬಸ್‌ಗೆ ಬೆಂಕಿ, ನಗರದಲ್ಲಿ 2 ದಿನ ನಿಷೇಧಾಜ್ಞೆ ಜಾರಿ;
ಮುಖ್ಯಮಂತ್ರಿ ವಿರುದ್ಧ ಗವರ್ನರ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ನಿಲುವನ್ನು ಖಂಡಿಸಿ ಶನಿವಾರ ಬೆಳಿಗ್ಗೆಯಿಂದಲೇ ಕರ್ನಾಟಕ ಬಂದ್ ‌ನಡೆಸಲಾಗುತ್ತಿದೆ. ಬೆಂಗಳೂರು ನಗರ, ಬೆನ್ನಿಗಾನ ಹಳ್ಳಿ, ದಾವಣಗೆರೆಯಲ್ಲಿ ಬಸ್‌ಗಳಿಗೆ ಬೆಂಕಿ ಹಚ್ಚಿ ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜಾಪುರದ ಶಿವಾಜಿ ಸರ್ಕಲ್‌ನಲ್ಲಿ ಕಲ್ಲು ತೂರಾಟ ನಡೆಸಿದ್ದು ರಿಕ್ಷಾಗಳು ಜಖಂಗೊಂಡಿದೆ.

ಹಲವೆಡೆ ಬಲವಂತದಿಂದ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ದಿಢೀರ್ ಬಂದ್‌ನಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ಇಲ್ಲದೆ ಪರದಾಡುವಂತಾಗಿದೆ. ಕೆಲವು ವಿಶ್ವವಿದ್ಯಾನಿಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹೊನ್ನಾಳಿ, ಶಿವಮೊಗ್ಗ, ಬೆಳಗಾವಿ, ಮಂಗಳೂರು, ಬಳ್ಳಾರಿ, ತುಮಕೂರು, ಬೆಂಗಳೂರಿನಲ್ಲಿ ಬಂದ್‌ನಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಬೆಂಗಳೂರಿನಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ (144) ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ನಗರದಾದ್ಯಂತ ಸುಮಾರು 18 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಆರ್‌ಟಿ ನಗರದ ಗಂಗೇನಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಬಲವಂತದಿಂದ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸುವ ಸಂದರ್ಭದಲ್ಲಿ ಕಲ್ಲೂ ತೂರಾಟ ನಡೆದಿದ್ದು, ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಕೂಡ ನಡೆದಿದೆ.

ಬಂದ್ ವಿರುದ್ಧ ಸಾರ್ವಜನಿಕರ ಆಕ್ರೋಶ;
ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಬಿಜೆಪಿ ದಿಢೀರನೆ ರಾಜ್ಯ ಬಂದ್ ನಡೆಸಿರುವ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂದ್‌ನಿಂದಾಗಿ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಊರಿಗೆ ಮರಳಲು ಸಾಧ್ಯವಾಗುತ್ತಿಲ್ಲ, ಶಾಲಾ-ಕಾಲೇಜಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಸ್ವಾರ್ಥಿ ರಾಜಕಾರಣಿಗಳನ್ನು ಗುಂಡಿ ತೋಡಿ ಹೂತು ಹಾಕಬೇಕು ಎಂಬುದಾಗಿ ತಮ್ಮ ಕಿಡಿಯನ್ನು ಹೊರಹಾಕಿದ್ದಾರೆ. ಏನೇ ಹೋರಾಟ ಇದ್ದರೂ ಕೂಡ ಅದನ್ನು ನ್ಯಾಯಾಲಯದಲ್ಲಿ ನೋಡಿಕೊಳ್ಳಬೇಕು. ಅದನ್ನು ಬಿಟ್ಟು ಬಂದ್‌ಗೆ ಕರೆ ನೀಡಿ, ಬಸ್‌ಗೆ ಬೆಂಕಿ ಹಚ್ಚುವುದು, ಶಾಲಾ-ಕಾಲೇಜು ವಾಹನಗಳಿಗೆ ಕಲ್ಲು ತೂರಾಟ ನಡೆಸುವುದು, ಸಾರ್ವಜನಿಕರ ಆಸ್ತಿ-ಪಾಸ್ತಿ ಹಾನಿ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ರಾಜಭವನಕ್ಕೆ ತೆರಳಿದ ಸಚಿವರ ನಿಯೋಗ;
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಚರ್ಚೆ ನಡೆಸಿದ ನಂತರ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಿಯೋಗವೊಂದು ಕಾಲ್ನಡಿಗೆಯಲ್ಲಿ ಶನಿವಾರ ಬೆಳಿಗ್ಗೆ ರಾಜಭವನಕ್ಕೆ ತೆರಳಿದ್ದು, ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶದ ಪ್ರತಿಯನ್ನು ಪಡೆದು, ರಾಜ್ಯಪಾಲರ ಜತೆ ಚರ್ಚೆ ನಡೆಸುವುದಾಗಿ ಸಚಿವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶದ ಪ್ರತಿಯನ್ನು ನೀಡುವಂತೆ ಶುಕ್ರವಾರ ರಾತ್ರಿ ಕೋರಿಕೊಂಡಾಗ ಅದನ್ನು ನೀಡಲು ರಾಜಭವನ ನಿರಾಕರಿಸಿದೆ. ಆ ನಿಟ್ಟಿನಲ್ಲಿ ಸಚಿವರ ನಿಯೋಗವೇ ನೇರವಾಗಿ ರಾಜ್ಯಪಾಲರನ್ನು ಭೇಟಿಯಾಗಿ ಪ್ರಾಸಿಕ್ಯೂಷನ್ ಆದೇಶದ ಪೂರ್ಣಪಾಠದ ಪ್ರತಿಯನ್ನು ನೀಡುವಂತೆ ಕೇಳಿಕೊಳ್ಳುತ್ತೇವೆ. ನಂತರ ನಾವು ಮುಂದಿನ ಹೆಜ್ಜೆಯ ಬಗ್ಗೆ ಆಲೋಚಿಸುವುದಾಗಿ ಸುರೇಶ್ ಕುಮಾರ್ ಈ ಸಂದರ್ಭದಲ್ಲಿ ವಿವರಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ