ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಭ್ರಷ್ಟಾಚಾರದ ಆರೋಪದಡಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಕ್ರಿಮಿನಲ್ ಮೊಕದ್ದಮೆ ಹೂಡಲು ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ಬಿಜೆಪಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ವಿರುದ್ಧ ವಕೀಲ ಬೋಪಣ್ಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ವಿರುದ್ಧ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ದಾಖಲಿಸಿದ್ದಾರೆ.
ರಾಜ್ಯ ಬಂದ್‌ಗೆ ಬಿಜೆಪಿ ನೀಡಿರುವ ಕರೆ ಕಾನೂನು ಮತ್ತು ಸಂವಿಧಾನ ಬಾಹಿರ ಎಂದು ಹೈಕೋರ್ಟ್‌ಗೆ ಸಲ್ಲಿಸಿರುವ ದೂರಿನಲ್ಲಿ ಬೋಪಣ್ಣ ಅವರು ತಿಳಿಸಿದ್ದಾರೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರನ್ನು ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಮಾಡಬೇಕೆಂದು ಕೋರಿದ್ದಾರೆ.
ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬಿಜೆಪಿ ಶನಿವಾರ ರಾಜ್ಯ ಬಂದ್‌ಗೆ ಕರೆ ನೀಡಿದೆ. ಬಂದ್ ಸಂದರ್ಭದಲ್ಲಿ ರೊಚ್ಚಿಗೆದ್ದ ಪ್ರತಿಭಟನಾಕಾರರು ಬಸ್, ಆಟೋಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಸ್ ಸಂಚಾರ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಜನಜೀವನ ಕೂಡ ಅಸ್ತವ್ಯಸ್ತಗೊಂಡಿದೆ.
ರಾಜ್ಯದ ಹಲವೆಡೆ ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಬಸ್, ಆಟೋಗಳಿಗೆ ಕಲ್ಲು ತೂರಾಟ ನಡೆಸಿರುವ ಘಟನೆಯೂ ಅಲ್ಲಲ್ಲಿ ನಡೆದಿದೆ. ಕೆಲವು ಕಡೆ ಅಂಗಡಿ-ಮುಂಗಟ್ಟುಗಳನ್ನು ಬಲವಂತದಿಂದ ಮುಚ್ಚಿಸುವ ಸಂದರ್ಭದಲ್ಲಿ ಘರ್ಷಣೆಯೂ ನಡೆದಿದೆ.
ಏತನ್ಮಧ್ಯೆ ಬಿಜೆಪಿ ಬಂದ್ ವಿರುದ್ಧ ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿ ಹೋರಾಟಕ್ಕೆ ಇಳಿದಿದೆ. ಬಿಜೆಪಿ ಕಾರ್ಯಕರ್ತರು ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಬಂದ್ ಮಾಡಿದ ಅಂಗಡಿಗಳನ್ನು ಮತ್ತೆ ಓಪನ್ ಮಾಡಲು ಮುಂದಾಗುವ ಮೂಲಕ ಸಾರ್ವಜನಿಕರು ಗೊಂದಲದಲ್ಲಿ ಸಿಲುಕಿದಂತಾಗಿದೆ.