ರಾಜ್ಯದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ತಮ್ಮ ನಡುವಿನ ಶೀತಲ ಸಮರ ಆರೋಗ್ಯಕರವಲ್ಲ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಮಾರ್ಮಿಕವಾಗಿ ನುಡಿದಿದ್ದಾರೆ.
ಶನಿವಾರ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ಸರಕಾರಕ್ಕೆ ಬಹುಮತ ಇದೆ. ಇಂತಹ ಸ್ಥಿತಿಯಲ್ಲಿ ವಿಧಾನಸಭೆ ವಿಸರ್ಜಿಸಿ ಎಂದು ನಾನ್ಯಾಕೆ ಹೇಳುತ್ತೇನೆ ಎಂದು ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ.
ಬಹುಮತ ಹೊಂದಿರುವ ಸರಕಾರವನ್ನು ವಿಸರ್ಜಿಸುವ ಪ್ರಶ್ನೆಯೇ ಇಲ್ಲ. ಆದರೆ ಬಹುಮತ ಕಳೆದುಕೊಂಡರೆ ವಿಧಾನಸಭೆಯನ್ನು ವಿಸರ್ಜಿಸುವುದಾಗಿ ಹೇಳಿದರು. ಅಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಕ್ತ ಅವಕಾಶ ಹೊಂದಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಅವೆಲ್ಲಕ್ಕಿಂತ ಮುಖ್ಯವಾಗಿ ತಮ್ಮ ಜೊತೆ ನಡೆಸಿದ ಸಂಭಾಷಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬಹಿರಂಗಪಡಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಭಾರದ್ವಾಜ್, ರಾಜ್ಯಪಾಲ ಮತ್ತು ಮುಖ್ಯಮಂತ್ರಿ ಗಂಡ-ಹೆಂಡತಿಯ ಸಂಬಂಧ ಇದ್ದಂತೆ. ಹಾಗಾಗಿ ಎಲ್ಲಾ ವಿಷಯವನ್ನು ಬಹಿರಂಗಪಡಿಸಬಾರದು. ಆದರೆ ಯಡಿಯೂರಪ್ಪ ಎಲ್ಲವನ್ನೂ ಹೊರಹಾಕುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಡುವೆ ಕಳೆದ ಕೆಲವು ತಿಂಗಳಿನಿಂದ ಶೀತಲ ಸಮರ ನಡೆಯುತ್ತಿದ್ದು, ಇತ್ತೀಚೆಗೆ ಮುಖ್ಯಮಂತ್ರಿ ವಿರುದ್ಧವೇ ಕ್ರಿಮಿನಲ್ ಮೊಕದ್ದಮೆ ಹೂಡಲು ಭಾರದ್ವಾಜ್ ಅವರು ಅನುಮತಿ ನೀಡಿದ ನಂತರ ಈ ತಿಕ್ಕಾಟ ತಾರಕಕ್ಕೇರಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.