ಬಿಜೆಪಿ ವಿರುದ್ಧ 'ಕೈ' ಸಮರ-ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ; ಕೃಷ್ಣ
ಬೆಂಗಳೂರು, ಭಾನುವಾರ, 30 ಜನವರಿ 2011( 14:52 IST )
NRB
ಆಡಳಿತಾರೂಢ ಬಿಜೆಪಿ ಸರಕಾರಕ್ಕೆ ದೂರಾಲೋಚನೆಯ ಕೊರತೆ ಇದ್ದು, ರಾಜ್ಯದಲ್ಲಿ ಬಿಜೆಪಿ ಅವನತಿಯತ್ತ ಸಾಗುತ್ತಿದೆ. ಅಲ್ಲದೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆರೋದು ಖಚಿತ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಭವಿಷ್ಯ ನುಡಿದಿದ್ದಾರೆ.
ಅವರು ಭಾನುವಾರ ನಗರದ ಶೇಷಾದ್ರಿಪುರಂನಲ್ಲಿರುವ ಜಕ್ಕರಾಯನಕೆರೆ ಮೈದಾನದಲ್ಲಿ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ನಾಡ ರಕ್ಷಣಾ ರ‌್ಯಾಲಿಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿಗೆ ಡಿನೋಟಿಫಿಕೇಷನ್ ಬಗ್ಗೆಯಷ್ಟೇ ಚಿಂತೆ. ರಾಜ್ಯದಲ್ಲಿ ಅಭಿವೃದ್ಧಿ ಮಸುಕಾಗಿದೆ ಎಂದು ವಾಗ್ದಾಳಿ ನಡೆಸಿದ ಅವರು, ಕೇವಲ ರಾಮನಾಮ ಜಪ ಮಾಡಿದ್ರೆ ಹಣ ಬರಲ್ಲ. ಸಂಪನ್ಮೂಲದ ಕ್ರೋಢೀಕರಣವೂ ಆಗಲ್ಲ. ಭ್ರಷ್ಟಾಚಾರ, ಸ್ವಜನಪಕ್ಷಪಾತದಿಂದಾಗಿ ಕರ್ನಾಟಕಕ್ಕೆ ಕೆಟ್ಟ ಹೆಸರು ತಂದ ಕೀರ್ತಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರಕಾರದ ಸಾಧನೆಯಾಗಿದೆ ಎಂದು ಆರೋಪಿಸಿದರು.
ಭಾರತಕ್ಕೆ ಹಲವಾರು ದೇಶಗಳ ಮುಖಂಡರು ಭೇಟಿ ನೀಡಿದ್ದಾರೆ. ಇದು ಕೇಂದ್ರದ ಆಡಳಿತಾರೂಢ ಯುಪಿಎ ಸರಕಾರದ ಸಾಧನೆಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.
ಸಿಎಂ ಜೈಲಿಗೆ ಹೋಗೋದು ಖಚಿತ-ಸಿದ್ದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹಾನ್ ಸುಳ್ಳುಗಾರ ಎಂದು ವಾಗ್ದಾಳಿ ನಡೆಸಿರುವ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಜೈಲಿಗೆ ಹೋಗೋದು ಖಚಿತ ಎಂದು ಹೇಳಿದರು. ಮುಖ್ಯಮಂತ್ರಿಗಳಿಗೆ ನೈತಿಕತೆ ಇದ್ದರೆ ಭೂಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಿ ಎಂದು ಸವಾಲು ಹಾಕಿದರು.
ಬಿಜೆಪಿ ಸರಕಾರದಿಂದ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಧೈರ್ಯವಿದ್ರೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿರುದ್ಧ ಕೇಸ್ ಹಾಕಲಿ ಎಂದು ಗುಡುಗಿದರು. ನಾಡ ರಕ್ಷಣಾ ರ‌್ಯಾಲಿಯಲ್ಲಿ ತಮ್ಮ ಮಾತಿನುದ್ದಕ್ಕೂ ಸಿಎಂ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಬಿಜೆಪಿ ಸರಕಾರದ ಕುರಿತು ನಾಡಿನ ಜನತೆಗೆ ಜಾಗೃತಿ ಮೂಡಿಸಲು ಕಾಂಗ್ರೆಸ್ ಇಂದು ರಾಜ್ಯದ ನಾಲ್ಕು ಭಾಗಗಳಲ್ಲಿ ನಾಡ ರಕ್ಷಣಾ ರ‌್ಯಾಲಿಗೆ ಚಾಲನೆ ನೀಡಿದೆ. ಈ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಕಾಂಗ್ರೆಸ್ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಗುಲಾಂ ನಬಿ ಆಜಾದ್, ಡಿಕೆಶಿ, ಧರಂಸಿಂಗ್, ಜಾಫರ್ ಶರೀಫ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.