ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ, ಮುಂದಿನ ಪೂರ್ಣ ಅವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಖಚಿತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ವಿರೋಧ ಪಕ್ಷಗಳು ಅನಗತ್ಯವಾಗಿ ನಾಯಕತ್ವ ಬದಲಾವಣೆಯ ಹುಯಿಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡುವ ಪ್ರಶ್ನೆಯೇ ಉದ್ಭವಿಸಿಲ್ಲ. ನಾಯಕತ್ವ ಬದಲಾವಣೆ ಆಗುವುದೂ ಇಲ್ಲ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಗಳ ರೇಸ್‌ಕೋರ್ಸ್ ರಸ್ತೆಯ ನಿವಾಸದಲ್ಲಿ ನಡೆದ ಸಚಿವರುಗಳ ಸಭೆಯ ನಂತರ ಮುಖ್ಯಮಂತ್ರಿ ಯಡಿಯೂರಪ್ಪನವರು ಸಮ್ಮುಖದಲ್ಲಿ ಮಾತನಾಡಿದ ಅವರು, ಬಿಜೆಪಿಯ ಯಾವುದೇ ಸಚಿವರು, ಶಾಸಕರು ನಾಯಕತ್ವ ಬದಲಾವಣೆಯ ಪ್ರಶ್ನೆಯನ್ನೇ ಎತ್ತಿಲ್ಲ, ಎತ್ತುವುದೂ ಇಲ್ಲ. ಎಲ್ಲರೂ ಮುಖ್ಯಮಂತ್ರಿ ಯಡಿಯೂರಪ್ಪನವರ ಪರವಾಗಿದ್ದಾರೆ. ಹಾಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ ಎಂದರು.
ಕಾಂಗ್ರೆಸ್, ಜೆಡಿಎಸ್ ಮುಖಂಡರು ಅನಗತ್ಯವಾಗಿ ನಾಯಕತ್ವ ಬದಲಾವಣೆಯ ಗುಮ್ಮನನ್ನು ಸೃಷ್ಟಿ ಮಾಡುತ್ತಿದ್ದಾರೆ. ಅವರ ಪ್ರಯತ್ನ ವಿಫಲವಾಗಲಿದೆ ಎಂದು ಹೇಳಿದರು.
ಬೃಹತ್ ಸಮಾವೇಶ: ಬಿಜೆಪಿ ಸರಕಾರ ಸಾವಿರ ದಿನಗಳನ್ನು ಪೂರೈಸಿರುವ ಸಂದರ್ಭದಲ್ಲಿ ಫೆಬ್ರುವರಿ 20ರಂದು ನಗರದಲ್ಲಿ ಆಯ್ದ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈಶ್ವರಪ್ಪ ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಮಾವೇಶ ಜನರ ಸಮಾವೇಶವಲ್ಲ. ಪಕ್ಷದ ಆಯ್ದ ಕಾರ್ಯಕರ್ತರ ಸಮಾವೇಶವಾಗಿದೆ. ಪಕ್ಷವನ್ನು ಬೇರುಮಟ್ಟದಲ್ಲಿ ಗಟ್ಟಿಗೊಳಿಸಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಸಮಾವೇಶ ನಡೆಯುತ್ತಿದೆ ಎಂದರು.
ಸಮಾವೇಶವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಉದ್ಘಾಟಿಸಲಿದ್ದಾರೆ. ಚುನಾವಣಾ ಉದ್ದೇಶದಿಂದ ಈ ಸಮಾವೇಶವನ್ನು ಏರ್ಪಡಿಸಿಲ್ಲ ಎಂದ ಅವರು, ಮಧ್ಯಂತರ ಚುನಾವಣೆಯ ಹಿನ್ನೆಲೆಯಲ್ಲಿ ಇದನ್ನು ಆಯೋಜಿಸಿಲ್ಲ ಎಂದು ಹೇಳಿದರು.