ಯಾವ ಕ್ಷಣ ಬೇಕಾದರೂ ತಮ್ಮ ಲೋಕಸಭೆ ಸ್ಥಾನಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಚನ್ನಪಟ್ಟಣದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕಣಕ್ಕಿಳಿಯುವುದು ಬಹುತೇಕ ನಿಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ.
ಎಪ್ರಿಲ್ 9ರಂದು ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯ ಹಿನ್ನಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವುದರಲ್ಲಿ ಕಾರ್ಯಮಗ್ನವಾಗಿದೆ. ಚನ್ನಪಟ್ಟಣ ಸಹಿತ ಜಗಳೂರು ಮತ್ತು ಬಂಗಾರಪೇಟೆ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ.
ಈ ನಡುವೆ ಜೆಡಿಎಸ್ ಭದ್ರಕೋಟೆ ಎಂದೇ ಪರಿಗಣಿಸಲಾಗಿರುವ ಚೆನ್ನಪಟ್ಟಣ ಪ್ರದೇಶದಿಂದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪಕ್ಷದ ವಕ್ತಾರ ವೈ.ಎಸ್.ವಿ. ದತ್ತ ತಿಳಿಸಿದ್ದಾರೆ.
ಭ್ರಷ್ಟಾಚಾರ ಸರಕಾರದ ವಿರುದ್ಧ ಹೋರಾಡಲು ರಾಜ್ಯದಲ್ಲಿ ಕುಮಾರಸ್ವಾಮಿ ಸಾರಥ್ಯ ಅತಿ ಅಗತ್ಯವಾಗಿದೆ ಎಂದವರು ತಿಳಿಸಿದರು.
ಬಿಜೆಪಿ ಪಟ್ಟಿ ಅಂತಿಮ? ಇದೇ ಸಂದರ್ಭದಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಗೊಳಿಸಿದೆ ಎಂದು ಮೂಲಗಳು ಹೇಳಿವೆ. ಆಪರೇಷನ್ ಕಮಲಕ್ಕೆ ಬಲಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ರಾಮಚಂದ್ರ ಅವರು ಜಗಳೂರಿನಿಂದ ಸ್ಪರ್ಧಿಸುವ ಸಾಧ್ಯತೆಯಿದೆ.
ಅದೇ ರೀತಿ ಬಂಗಾರಪೇಟೆಯಿಂದ ಎಂ. ನಾರಾಯಣಸ್ವಾಮಿ ಹಾಗೂ ಚನ್ನಪಟ್ಟಣದಿಂದ ಸಿ.ಪಿ. ಯೋಗೇಶ್ವರ್‌ರನ್ನು ಮತ್ತೆ ಕಣಕ್ಕಿಳಿಸುವ ಸಾಧ್ಯತೆಯಿದೆ. ಚನ್ನಪಟ್ಟಣದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಯೋಗೇಶ್ವರ್ ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲುಂಡಿದ್ದರು.