ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾರ್ಯಕರ್ತರ ಒತ್ತಡಕ್ಕೆ ಮಣಿದ ಎಚ್‌ಡಿಕೆ; ಚನ್ನಪಟ್ಟಣದಿಂದ ಸ್ಪರ್ಧೆ (Kumaraswamy | JDS | Deve gowda | Channa pattana | Election)
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಸಮಾಧಾನದ ನಂತರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸೋಮವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ ಸಂದರ್ಭದಲ್ಲಿ ಕಾರ್ಯಕರ್ತರು ಅತೃಪ್ತಿ ವ್ಯಕ್ತಪಡಿಸಿ ಗಲಾಟೆ ಮಾಡಿದ ಪರಿಣಾಮ ಕೊನೆಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚನ್ನಪಟ್ಟಣದಿಂದಲೇ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಿಸಿದರು.

ಜೆಡಿಎಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕುಮಾರಸ್ವಾಮಿಯವರು, ತಾನು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದಾಗ, ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು ಕುಮಾರಸ್ವಾಮಿ ಸ್ಪರ್ಧಿಸಲೇಬೇಕು ಎಂದು ಒತ್ತಾಯಿಸಿದ ಪರಿಣಾಮ ಸಭೆಯಲ್ಲಿ ಅರ್ಧ ಗಂಟೆಗಳ ಕಾಲ ಗದ್ದಲ ನಡೆಯಿತು.

ಚನ್ನಪಟ್ಟಣ ಕ್ಷೇತ್ರದಿಂದ ಕುಮಾರಸ್ವಾಮಿಯವರೇ ಸ್ಪರ್ಧಿಸಬೇಕು ಎಂಬುದು ಕಾರ್ಯಕರ್ತರ ಒತ್ತಡ. ಈ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಸಮಾಧಾನದಿಂದ ಇರುವಂತೆ ಸಾಕಷ್ಟು ಮನವಿ ಮಾಡಿಕೊಂಡರು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ತಲೆಬಾಗಿದ್ದೇನೆ. ನಿಮ್ಮ ಅಭಿಮಾನಕ್ಕೆ ಕಟ್ಟು ಬಿದ್ದು ಸ್ಪರ್ಧಿಸುತ್ತೇನೆ ಎಂದು ಭಾನುವಾರ ಹೇಳಿದ್ದೆ. ಆದರೆ ಪ್ರಸಕ್ತ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಮಜಾಯಿಷಿ ನೀಡಿದರು.

ಆದರೂ ರೊಚ್ಚಿಗೆದ್ದ ಕಾರ್ಯಕರ್ತರು ಸಮಜಾಯಿಷಿ ಮಾತನ್ನು ಕೇಳದೆ ಕುಮಾರಸ್ವಾಮಿಯವರೇ ಸ್ಪರ್ಧಿಸಬೇಕು ಎಂದು ಘೋಷಣೆ ಕೂಗಿದರು. ಕಾರ್ಯಕರ್ತರ ಮಾತಿಗೆ ಬೆಲೆ ಕೊಡುವುದಾಗಿ ಹೇಳಿದ ಕುಮಾರಸ್ವಾಮಿ ತಾನು ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಕಾರ್ಯಕರ್ತರಿಗೆ ಭರವಸೆ ನೀಡಿದರು.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಸರಿಯಲ್ಲ ಎಂದು ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಕುಮಾರಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ, ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲಿ. ಆದರೆ ಉಪ ಚುನಾವಣೆ ಸ್ಪರ್ಧೆ ಅಗತ್ಯವಿರಲಿಲ್ಲ ಎಂದು ಹೇಳಿದ್ದರು. ತಾನು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಕುಮಾರಸ್ವಾಮಿ ಭಾನುವಾರ ಘೋಷಿಸಿದ್ದು, ಅದಕ್ಕೆ ಗೌಡರು ಸೋಮವಾರ ಈ ರೀತಿ ಪ್ರತಿಕ್ರಿಯೆ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಇವನ್ನೂ ಓದಿ