ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಭೂ ಹಗರಣದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಯಾವುದೇ ಒತ್ತಡವಿಲ್ಲ. ಒತ್ತಡಕ್ಕೆ ಮಣಿಯುವುದೂ ಇಲ್ಲ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚಿಸಿದ್ದು, ಕಾಲ ಮಿತಿಯೊಳಗೆ ನ್ಯಾಯಾಲಯಕ್ಕೆ ವರದಿ ನೀಡುವುದಾಗಿ ಹೇಳಿದರು.
ನಗರದ ಭಾರತೀಯ ವಿದ್ಯಾಭವನದಲ್ಲಿ ಶನಿವಾರ ನಡೆದ ಭ್ರಷ್ಟಾಚಾರ ವಿರೋಧಿ ಸಮಾವೇಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಮೇಲೆ ಯಾವುದೇ ಒತ್ತಡವಿಲ್ಲ. ತಮ್ಮ ಅಧಿಕಾರಿಗಳು ಅದಕ್ಕೆ ಬಗ್ಗುವುದಿಲ್ಲ ಎಂದರು.
ಪ್ರಕರಣದ ತನಿಖೆಗೆ ಏನಾದರು ಅಡೆತಡೆ ಇದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಹೆಗ್ಡೆ, ನಮಗ್ಯಾವ ಅಡೆತಡೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ವಿರುದ್ಧ ಎಫ್ಐಆರ್ ದಾಖಲಿಸುವ ಬಗ್ಗೆ ಲೋಕಾಯುಕ್ತ ಪೊಲೀಸರು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿದ ನಂತರ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.