3 ಕ್ಷೇತ್ರದಲ್ಲಿ ಬಿಜೆಪಿ ಗೆದ್ರೆ ರಾಜಕೀಯ ಸನ್ಯಾಸ: ಪೂಜಾರಿ
ಬೆಂಗಳೂರು, ಬುಧವಾರ, 6 ಏಪ್ರಿಲ್ 2011( 15:46 IST )
PR
ಬಂಗಾರಪೇಟೆ, ಜಗಳೂರು ಹಾಗೂ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದರೆ ತಾನು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸವಾಲು ಹಾಕಿದ್ದಾರೆ.
ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬುಧವಾರ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದರಲ್ಲಿ ಬಿಜೆಪಿ ಸೋತರೆ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇದು ನನ್ನ ಬಹಿರಂಗ ಸವಾಲು ಎಂದು ಹೇಳಿದರು.
ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಹೇಳಿದ ಅವರು, ಒಂದು ಕ್ಷೇತ್ರದಲ್ಲಿ ಬಿಜೆಪಿ ಸೋತರೆ ಸಿಎಂ ರಾಜೀನಾಮೆ ಕೊಡಬೇಕು. ಈ ಸವಾಲನ್ನು ಸ್ವೀಕರಿಸುವ ಬಗ್ಗೆ ಮುಖ್ಯಮಂತ್ರಿ ಗುರುವಾರದೊಳಗೆ ಪ್ರತಿಕ್ರಿಯೆ ನೀಡಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಆಡಳಿತಾರೂಢ ಬಿಜೆಪಿ ಪಕ್ಷದ ಆಪರೇಷನ್ ಕಮಲದಿಂದಾಗಿ ರಾಜ್ಯದಲ್ಲಿ ಉಪಚುನಾವಣೆ ನಡೆಯುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಪ್ರಜ್ಞಾವಂತ ಮತದಾರರು ಈ ಬಾರಿ ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಯಡಿಯೂರಪ್ಪನವರ ವಿರುದ್ಧವೇ ಭ್ರಷ್ಟಾಚಾರದ ಆರೋಪ ಇದ್ದರೂ ಕೂಡ ತಾವು ಅಧಿಕಾರದ ಗದ್ದುಗೆಯಿಂದ ಕೆಳಗಿಳಿಯಲ್ಲ ಎನ್ನುತ್ತಾರೆ. ಅದೇ ರೀತಿ ಬಿಜೆಪಿ ಹೈಕಮಾಂಡ್ ಕೂಡ ಅವರನ್ನು ಕೆಳಗಿಳಿಸುವ ಧೈರ್ಯ ತೋರುತ್ತಿಲ್ಲ. ಯಾಕೆಂದರೆ ಹೈಕಮಾಂಡ್‌ಗಿಂತ ಸಿಎಂ ಪವರ್‌ಫುಲ್ ಎಂದು ವ್ಯಂಗ್ಯವಾಡಿದರು.