ಆಡಳಿತಾರೂಢ ಬಿಜೆಪಿ ವಿರುದ್ಧ ಜೆಡಿಎಸ್ ಜನಾಂದೋಲನ ನಡೆಸಿದ್ದು,ಕಾಂಗ್ರೆಸ್ ರಾಜಭವನ ಚಳವಳಿ ಮಾಡಿ ರಾಜ್ಯಪಾಲರಿಗೆ ದೂರು ನೀಡಿತ್ತು. ಏತನ್ಮಧ್ಯೆ ಬಿಜೆಪಿ ಮುಖಂಡರು ಮಂಗಳವಾರ ರಾಜ್ಯಪಾಲರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ದೂರು ನೀಡಿದೆ.
ಬಿಜೆಪಿ ವಕ್ತಾರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ವಿಧಾನಪರಿಷತ್ ಸದಸ್ಯ ಅಶ್ವತ್ಥ್ ನಾರಾಯಣ ನೇತೃತ್ವದ ನಿಯೋಗವು ಇಂದು ರಾಜಭವನದಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರನ್ನು ಭೇಟಿ ಮಾಡಿ ದೂರು ನೀಡಿತು.
ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಹಲವು ಮುಖಂಡರು ಭಾಗಿಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ.
ರಾಜ್ಯಪಾಲರಿಗೆ ದೂರು ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಆಯನೂರು, ವಿಪಕ್ಷಗಳ ಅಕ್ರಮ ಗಣಿಗಾರಿಕೆ ಕುರಿತು ದಾಖಲೆ ಸಲ್ಲಿಸಿದ್ದೇವೆ. ನಮ್ಮ ದಾಖಲೆ ನೋಡಿ ರಾಜ್ಯಪಾಲರಿಗೆ ಅಚ್ಚರಿಯಾಯಿತು. ಬಿಜೆಪಿ ಸಲ್ಲಿಸಿರುವ ದೂರಿನ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಹೇಳಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಅನಾವಶ್ಯಕವಾಗಿ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದೆ. ಆದರೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಯಾರು? ಅದರಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ ಎಂಬ ಪೂರ್ಣ ಮಾಹಿತಿಯೊಂದಿಗೆ ದಾಖಲೆಗಳನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಅಷ್ಟೇ ಅಲ್ಲ ರಾಷ್ಟ್ರಪತಿ, ಲೋಕಾಯುಕ್ತರಿಗೆ ದೂರು ಸಲ್ಲಿಸುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.