ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರ ಶಿಫಾರಸ್ಸಿಗೆ ಕೇಂದ್ರ ಸಮ್ಮತಿಸದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಶಾಸಕರು ಬೆದರಿಕೆಯೊಡ್ಡಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನೊಳಗೊಂಡ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಮುಖರು ಸೋಮವಾರ ಸಂಜೆ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ.
ಏತನ್ಮಧ್ಯೆ ಕಾಂಗ್ರೆಸ್ ಜತೆ ಕೈಜೋಡಿಸಿ ತಮ್ಮ ಶಾಸಕರಿಂದಲೂ ರಾಜೀನಾಮೆ ಕೊಡಿಸಲು ಸಿದ್ದವಿರುವುದಾಗಿ ಜೆಡಿಎಸ್ ಕೂಡ ಭರವಸೆ ನೀಡಿದೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲರು ಮಾಡಿರುವ ಶಿಫಾರಸನ್ನು ಕೂಡಲೇ ಅಂಗೀಕರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮಂಗಳವಾರ ಬೆಳಿಗ್ಗೆ ಪ್ರಮುಖ ನಾಲ್ಕು ಹೈವೇಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಹಿಂದೇಟು ಹಾಕದೆ, ರಾಷ್ಟ್ರಪತಿ ಆಡಳಿತ ಹೇರುವಂತೆ ಆಗ್ರಹಿಸಿದೆ.
ಅಲ್ಲದೇ ಮತ್ತೊಂದೆಡೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದ್ದು, ಯಾವುದೇ ಕಾರಣಕ್ಕೂ ರಾಷ್ಟ್ರಪತಿ ಆಡಳಿತ ಹೇರುವ ಶಿಫಾರಸಿಗೆ ಅಂಕಿತ ಹಾಕಬಾರದು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೇಂದ್ರ ಶಿಫಾರಸು ಮಾಡದಿದ್ರೆ ಎಂಎಲ್‌ಸಿಗೆ ರಾಜೀನಾಮೆ-ಮೋಟಮ್ಮ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲರು ಕೇಂದ್ರಕ್ಕೆ ಕಳುಹಿಸಿರುವ ಶಿಫಾರಸನ್ನು ಅಂಗೀಕರಿಸದಿದ್ದರೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ವಿಧಾನಪರಿಷತ್ ಪ್ರತಿಪಕ್ಷ ನಾಯಕಿ ಮೋಟಮ್ಮ ಬೆದರಿಕೆ ಹಾಕಿದ್ದಾರೆ.
ಜನವಿರೋಧಿ ಸರಕಾರ ರಾಜ್ಯದಲ್ಲಿ ಆಡಳಿತ ನಡೆಸಲು ನೈತಿಕ ಹಕ್ಕಿಲ್ಲ. ಹಾಗಾಗಿ ಕೇಂದ್ರ ಸರಕಾರ ಯಾವುದೇ ಮುಲಾಜಿಗೆ ಒಳಗಾಗದೆ ಕೂಡಲೇ ರಾಷ್ಟ್ರಪತಿ ಆಡಳಿತ ಹೇರುವಂತೆ ಒತ್ತಾಯಿಸಿದರು. ಅಲ್ಲದೇ ಕೇಂದ್ರ ಸರಕಾರ ರಾಷ್ಟ್ರಪತಿ ಆಡಳಿತ ಹೇರದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪ್ರತಿಭಟನೆ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.