ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲೋಕಾಯುಕ್ತರಿಂದ ಉದ್ದೇಶಪೂರ್ವಕವಾಗಿ ವರದಿ ವಿಳಂಬ: ಕಾಂಗ್ರೆಸ್ (Santosh Hegde | Illegal mining | Inquiry report | Government | Congress)
ಲೋಕಾಯುಕ್ತರಿಂದ ಉದ್ದೇಶಪೂರ್ವಕವಾಗಿ ವರದಿ ವಿಳಂಬ: ಕಾಂಗ್ರೆಸ್
ಬೀದರ್, ಶನಿವಾರ, 2 ಜುಲೈ 2011( 18:24 IST )
PTI
ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಲು ಲೋಕಾಯುಕ್ತ ಸಂತೋಷ್ ಹೆಗ್ಡೆ ಉದ್ದೇಶಪೂರ್ವಕವಾಗಿ ವಿಳಂಬ ನೀತಿಯನ್ನು ಅನುಸರಿಸುತ್ತಿದ್ದು, ಪರೋಕ್ಷವಾಗಿ ಸರಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
'ಕಾಂಗ್ರೆಸ್ ನಡಿಗೆ ಜನರ ಬಳಿಗೆ' ಕಾರ್ಯಕ್ರಮದ ನಿಮಿತ್ಯ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ್ ಮಿಸ್ತ್ರಿ, ಪ್ರಸ್ತುತ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿರುವ ಸಂತೋಷ್ ಹೆಗ್ಡೆ ಮುಂದಿನ ತಿಂಗಳಲ್ಲಿ ನಿವೃತ್ತಿಯಾಗುತ್ತಿದ್ದರೂ ಅಕ್ರಮ ಗಣಿಗಾರಿಕೆ ವರದಿಯನ್ನು ಸಲ್ಲಿಸುವ ಯಾವುದೇ ಸೂಚನೆಗಳು ಕಂಡುಬರುತ್ತಿಲ್ಲ ಎಂದರು.
ಲೋಕಪಾಲ ಮಸೂದೆ ಮತ್ತು ಕರಡು ರಚನೆಯಲ್ಲಿ ನಿರತರಾಗಿರುವುದರಿಂದ, ಹೆಗ್ಡೆ ಅಕ್ರಮ ಗಣಿಗಾರಿಕೆ ವರದಿಯನ್ನು ಸಲ್ಲಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ವ್ಯಂಗವಾಡಿದರು.
ರಾಜ್ಯದ ಅಕ್ರಮ ಗಣಿಗಾರಿಕೆ ರಾಜ್ಯದ ಸಂಪತ್ತು ಲೂಟಿಯಲ್ಲಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಳ್ಳಾರಿಯ ರೆಡ್ಡಿ ಸಹೋದರರು ಪ್ರಮುಖರಾಗಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಆರೋಗ್ಯ ಕವಚ ಯೋಜನೆಗಾಗಿ ಕೇಂದ್ರ ಸರಕಾರ ಬೃಹತ್ ಪ್ರಮಾಣದ ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ, ರಾಜ್ಯ ಸರಕಾರ ಇದರ ಸಂಪೂರ್ಣ ಲಾಭ ಪಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಮೋಟಮ್ಮ, ಧರ್ಮಸಿಂಗ್, ಶಾಸಕ ರಹೀಂಖಾನ್ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಈಶ್ವರ್ ಖಂಡ್ರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.