ಗಣಿಧಣಿ, ಒಬಳಾಪುರಂ ಮೈನಿಂಗ್ ಕಂಪನಿ ಮಾಲೀಕ ಗಾಲಿ ಜನಾರ್ದನ ರೆಡ್ಡಿ ಬಂಧನ ಖಂಡಿಸಿ ಮಂಗಳವಾರವೂ ಬೀದಿಗಿಳಿದ ರೆಡ್ಡಿ ಬೆಂಬಲಿಗರು, ಅಭಿಮಾನಿಗಳು ಜಿಲ್ಲಾಧಿಕಾರಿ ಕಚೇರಿ, ಕಂದಾಯ ಇಲಾಖೆ ಕಚೇರಿ ಹಾಗೂ ಕಾರ್ಮಿಕ ಇಲಾಖೆ ಕಚೇರಿಗಳಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಲ್ಲದೇ ರೆಡ್ಡಿ ಅಭಿಮಾನಿಯೊಬ್ಬ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು.
ಬಳ್ಳಾರಿ, ಸಿರಗುಪ್ಪದಲ್ಲಿ ಜನಾರ್ದನ ರೆಡ್ಡಿ ಬಂಧನ ಖಂಡಿಸಿ ಸಾವಿರಾರು ಮಂದಿ ಪ್ರತಿಭಟನೆ ನಡೆಸಿ ಟಯರ್‌ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಸಿಬಿಐಯನ್ನು ಬಳಸಿಕೊಂಡು ದುರುದ್ದೇಶಪೂರ್ವಕವಾಗಿ ನಮ್ಮ ನಾಯಕರನ್ನು ಜೈಲಿಗಟ್ಟಿದೆ ಎಂದು ಆರೋಪಿಸಿ ಕಾಂಗ್ರೆಸ್ ಹಾಗೂ ಸೋನಿಯಾಗಾಂಧಿ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಹಾಗೂ ಸಿರಗುಪ್ಪ ಬಂದ್‌ಗೆ ಕರೆ ನೀಡಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗಡಿ, ಮುಂಗಟ್ಟುಗಳು ಬಂದ್ ಆಗಿದ್ದು, ಜನಸಂಚಾರ ವಿರಳವಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬಳ್ಳಾರಿ ರಾಯಲ್ ಸರ್ಕಲ್ ಸಮೀಪ ನೂರಾರು ಸಂಖ್ಯೆಯಲ್ಲಿ ಜಮಾಯಿಸಿರುವ ರೆಡ್ಡಿ ಪರ ಬೆಂಬಲಿಗರು ರಸ್ತೆ ತಡೆಗಟ್ಟಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಜಿಲ್ಲಾಧಿಕಾರಿ ಕಚೇರಿ ಆವರಣ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ ಕಚೇರಿಗೆ ಕಲ್ಲು ತೂರಾಟ ನಡೆಸಿದರು. ಅಲ್ಲದೇ ಜಿಲ್ಲಾಧಿಕಾರಿ ಕಚೇರಿಯ ನಾಲ್ಕು ಕಂಪ್ಯೂಟರ್‌ಗಳನ್ನು ಧ್ವಂಸಗೊಳಿಸಿದ್ದಾರೆ. ಎಸಿ ಕಚೇರಿಯ ಕಿಟಕಿ ಗಾಜು ಪುಡಿಗೈದಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ರೆಡ್ಡಿ ಅಭಿಮಾನಿ ಆತ್ಮಹತ್ಯೆ ವಿಫಲಗೊಳಿಸದ ಪೊಲೀಸರು: ಜನಾರ್ದನ ರೆಡ್ಡಿ ಬಂಧನಕ್ಕೆ ಬಳ್ಳಾರಿ, ಸಿರಗುಪ್ಪದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಏತನ್ಮಧ್ಯೆ ಬಳ್ಳಾರಿಯಲ್ಲಿ ರೆಡ್ಡಿ ಅಭಿಮಾನಿ ಸುಂಗಯ್ಯ ಎಂಬಾತ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಆತ್ಮಹತ್ಯೆ ಪ್ರಯತ್ನ ವಿಫಲಗೊಳಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ.